ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ವಿನಯಪೂರ್ವಕವಾಗಿ ಸ್ವೀಕರಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಚುನಾವಣಾ ಫಲಿತಾಂಶ ಗಮನಿಸಿದರೆ ಬಿಜೆಪಿ ಹಾಗೂ ಎಂಇಎಸ್ ಒಂದಾದಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಕಳೆದ 25 ವರ್ಷಗಳಿಂದಲೂ ಬೆಳಗಾವಿಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇತ್ತು. ಆದರೆ, ಈ ಬಾರಿ ಆ ರೀತಿ ಆಗಿಲ್ಲ, ಸೋಲಿಗೆ ಅನೇಕ ಕಾರಣಗಳಿವೆ ಎಂದರು.
ವಿಧಾನಸಭೆ ವಾತಾವರಣ ಬೇರೆ, ಲೋಕಸಭಾ ಚುನಾವಣೆ ವಾತಾವರಣವೇ ಬೇರೆ. ಚುನಾವಣಾ ಲೆಕ್ಕಾಚಾರದ ಬಗ್ಗೆ ಹೇಳುವುದಾದರೆ ಒಂದೊಂದು ಕ್ಷೇತ್ರಕ್ಕೆ ಒಂದೊಂದು ದೃಷ್ಟಿಕೋನ ಇರುತ್ತದೆ. ಆದರೆ, ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಮೊದಲಿನಿಂದಲೂ ಉತ್ತಮ ವಾತಾವರಣ ಇತ್ತು. ಜನ ಬೆಂಬಲ ಕೂಡ ವ್ಯಕ್ತವಾಗಿತ್ತು. ಈ ನಡುವೆಯೂ ಫಲಿತಾಂಶ ನಮಗೆ ಕೈ ಕೊಟ್ಟಿತು ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗೆಲ್ಲದಿರಬಹುದು. ಆದರೆ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಜನರ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಸ್ವಾರ್ಥ ಬಿಟ್ಟು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.