ಬೆಂಗಳೂರು, ಜೂನ್ 12: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿದೆ. ಇದರ ಬೆನ್ನಲ್ಲೇ ಅವರು ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ವಿರುದ್ಧದ ದೂರಿನಲ್ಲಿ ಅಪರಾಧದ ಅಂಶಗಳಿಲ್ಲದಿರುವುದರಿಂದ ಪ್ರಕರಣವನ್ನು ರದ್ದು ಪಡಿಸಬೇಕು ಎಂದು ಅವರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ತಮ್ಮ ಪುತ್ರಿಯೊಂದಿಗೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮಹಿಳೆಯೊಬ್ಬರು ಬಿಎಸ್ವೈ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು.
ಮತ್ತೊಂದೆಡೆ, ದೂರುದಾರ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೇ 27ರಂದು ಮೃತಪಟ್ಟಿದ್ದರು.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.