ಬೆಂಗಳೂರು, ಜೂನ್ 22: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಇಂದು (ಜೂ.22) ಮೃತಪಟ್ಟಿದ್ದಾರೆ. ಕಮಲಾ ಹಂ.ಪಾ ನಾಗರಾಜಯ್ಯ ಅವರಿಗೆ ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.
ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಅಮೆರಿಕನ್ ಡಾಲರ್ಸ್ ಕಾಲೋನಿಯಲ್ಲಿ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಂಜೆಯ ತನಕ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಇಚ್ಛೆಯಂತೆ ರಾಮಯ್ಯ ಮೆಡಿಕಲ್ ಕಾಲೇಜಿಗೆ ದೇಹದಾನ ಮಾಡಲಾಗುವುದು ಎಂದು ಅವರ ಕುಟುಂಬ ತಿಳಿಸಿದೆ.
ಕಮಲಾ ಹಂಪನ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ 1935ರ ಅಕ್ಟೋಬರ್ 28ರಂದು ಜನಿಸಿದರು. ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ, ಪಿಹೆಚ್ಡಿ ಪದವಿ ಪಡೆದರು. ತಮ್ಮ ಅಧ್ಯಯನ, ಅಧ್ಯಾಪನ, ಲೇಖನ,ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿರುವ ಪ್ರೊ.ಕಮಲಾ ಹಂಪನಾ ಅವರು ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ.