ಬೆಂಗಳೂರು, ಜೂನ್ 22: ರಾಜ್ಯಾದ್ಯಂತ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಎಲ್ಲ ಆಸ್ಪತ್ರೆಗಳಿಗೂ ಅಲರ್ಟ್ ಆಗಿರುವಂತೆ ಸೂಚಿಸಿದ್ದೇನೆ. ಮಳೆಗಾಲ ಆರಂಭವಾಗಿದ್ದರಿಂದ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಾನಗರ ಪಾಲಿಕೆಗಳಿಗೆ ಎಲ್ಲ ಸೂಚನೆ ನೀಡಲಾಗಿದೆ. ಫಾಗಿಂಗ್ ಸಿಂಪರಣೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಹೇಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು.
ಈಗಾಗಲೇ ಸರ್ಕಾರದಿಂದ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಿಗೆ ಸೂಚನೆ ನೀಡಿದ್ದೇವೆ. ಕಲಬುರಗಿ ಜಿಲ್ಲೆಯ ಸ್ಥಿತಿಗತಿ ಬಗ್ಗೆ ಇವತ್ತು ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ಕರೆದಿದ್ದೇವೆ ಎಂದು ತಿಳಿಸಿದರು.
ಕಲಬುರಗಿಯ ಜಯದೇವ ಆಸ್ಪತ್ರೆಯಲ್ಲಿ ನೀರಿನ ಕೊರತೆ ಉಂಟಾಗಿರುವ ವಿಚಾರವಾಗಿ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯಲ್ಲಿ ಯಾವುದೇ ಲೋಪವಾಗಿಲ್ಲ. ಭಾರಿ ಮಳೆಯಿಂದ ಮಣ್ಣು ಮಿಶ್ರಿತ ನೀರು ಸರಬರಾಜು ಆಗಿದೆ. ಹೀಗಾಗಿ ಕೆಲ ಕಾಲ ಆಪರೇಷನ್ ಮುಂದೂಡಲಾಗಿತ್ತು. ವಿಪಕ್ಷ ನಾಯಕ ಅಶೋಕ್ ಮೊಸರಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಅಶೋಕ್ ಕೆಲಸ ನೋಡಿ ನಗು ಬರುತ್ತೆ. ಆರ್.ಅಶೋಕ್ ಪತ್ರ ಬರೆಯಲಿ ನಾವು ಪರಿಶೀಲನೆ ಮಾಡುತ್ತೇವೆ ಎಂದರು.
ಮಳೆಗಾಲ ಆಗಿರುವುದರಿಂದ ಡೆಂಘೀ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕಮಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ವರದಿಯಾಗಿವೆ. ಡೆಂಘೀ ಪೀಡಿತರ ಸಾವಿನ ಪ್ರಮಾಣ ಕಡಿಮೆಯಿದೆ. ಡೆಂಘೀ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜನರು ಕೂಡ ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸೊಳ್ಳೆಗಳ ಮೂಲಕ ಡೆಂಘೀ ಹರಡುತ್ತಿದೆ. ನೀರು ನಿಂತರೆ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಗಳ ಮುಂದೆ ನೀರು ನಿಲ್ಲದಂತೆ ಜನರು ನೋಡಿಕೊಳ್ಳಬೇಕು. ಸೊಳ್ಳೆಗಳು ಉತ್ಪತ್ತಿಯಾಗದಂತೆ ನಿಗಾ ವಹಿಸಬೇಕು ಎಂದರು.