ಹುಬ್ಬಳ್ಳಿ,ಏ.18 : ನಗರದ ಪಾಲಿಕೆ ಸದಸ್ಯರೊಬ್ಬರ ಪುತ್ರಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆಗೈದಿರುವ ಘಟನೆ ನಗರದ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ಇಂದು ಸಂಜೆ ನಡೆದಿದೆ. ನೇಹಾ ಹಿರೇಮಠ (24) ಕೊಲೆಗೀಡಾದ ಯುವತಿ. ಮೃತ ನೇಹಾ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳು. ನಗರದ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇಂದು ಪರೀಕ್ಷೆ ಇತ್ತು. ಕಾಲೇಜಿಗೆ ತೆರಳಿದ್ದ ವೇಳೆ ದುಷ್ಕರ್ಮಿಯೊಬ್ಬ ಏಕಾಏಕಿ ದಾಳಿ ಮಾಡಿ ಕೊಲೆ ಮಾಡಿದ್ದಾನೆ.
ದಾಳಿಯಿಂದ ನೇಹಾ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಕೂಡಲೇ ಸ್ಥಳೀಯ ಸಹಪಾಠಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ನೇಹಾ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಕಿಮ್ಸ್ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ವಿಷಯ ತಿಳಿದು ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಅನೇಕ ಮುಖಂಡರು ಭೇಟಿ ನೀಡಿದ್ದಾರೆ.