ಹುಬ್ಬಳ್ಳಿ: ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಹೋರಾಟಗಾರರು ಹೋರಾಡಿದ್ದಾರೆ. ಅವರನ್ನು ಸ್ಮರಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಬೃಹತ್ ಪಾರಂಪರಿಕ ನಡಿಗೆಯೂ ಯಶಸ್ವಿಯಾಗಿದೆ. ಆ ಮೂಲಕ ಹೊಸ ಪರಂಪರೆ ಪ್ರಾರಂಭವಾಗಿದೆ. ಪ್ರತಿಯೊಬ್ಬರೂ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಿ, ಗೌರವಿಸಬೇಕು ಎಂದು ಶಾಸಕರಾದ ಮಹೇಶ ಟೆಂಗಿನಕಾಯಿ ಹೇಳಿದರು.
ವಿದ್ಯಾನಗರದ ಮಹಿಳಾ ವಿದ್ಯಾಪೀಠದಲ್ಲಿ ಜಿಲ್ಲಾಡಳಿತ, ಹುಬ್ಬಳ್ಳಿ ತಾಲೂಕು ಆಡಳಿತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಪಾರಂಪರಿಕ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾವು ಶಾಲಾ ದಿನಗಳಲ್ಲಿ
ಪಠ್ಯ ಚಟುವಟಿಕೆಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಓದಿ ತಿಳಿದುಕೊಂಡಿದ್ದೇವೆ. 1942 ರ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಹುಬ್ಬಳ್ಳಿಯ 13 ವರ್ಷದ ಬಾಲಕ ನಾರಾಯಣ ಡೋಣಿ ಅವರು ಹೋರಾಟದಲ್ಲಿ ಭಾಗಿಯಾಗಿ, ಪ್ರಾಣ ತ್ಯಾಗ ಮಾಡಿದರು.
ಅವರು ಸುಭಾಷಚಂದ್ರ ಬೋಸ್ ಅವರ ಪ್ರೇರಣೆಯಿಂದ ಹೋರಾಟದಲ್ಲಿ ಧುಮುಕಿದರು. ನಾರಾಯಣ ಡೋಣಿ ಅವರ ಕುರಿತು ಹೆಚ್ಚು ಪ್ರಚಾರ ಮಾಡಬೇಕಿದೆ ಎಂದು ಅವರು ಹೇಳಿದರು.
ಲ್ಯಾಮಿಂಗ್ಟನ್ ಶಾಲೆಯಲ್ಲಿ ಅವರ ಜೀವನ, ಹೋರಾಟದ ಕುರಿತು ಗ್ಯಾಲರಿ, ಚಿತ್ರಗಳನ್ನು ಅಳವಡಿಸಬೇಕು. ಭಾರತ ದೇಶ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ. ದೇಶದ ಪ್ರಗತಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಅವರು ತಿಳಿಸಿದರು.
ಶಾಸಕರಾದ ಎನ್.ಎಚ್.ಕೋನರೆಡ್ಡಿ ಅವರು ಮಾತನಾಡಿ, ಹುಬ್ಬಳ್ಳಿಯೂ ಸಾಂಸ್ಕೃತಿಕ ನಗರಿ, 2 ನೇ ರಾಜಧಾನಿಯಾಗಿ ಗುರುತಿಸಿಕೊಂಡಿದೆ. ಧಾರವಾಡ ಜಿಲ್ಲೆಯು ಸ್ವಾತಂತ್ರ್ಯ ಹೋರಾಟಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಎಲ್ಲರೂ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗಿಯಾಗಬೇಕು. ಆ ಮೂಲಕ ಎಲ್ಲರೂ ಸ್ವಾತಂತ್ರ್ಯದ ಹಿರಿಮೆ ಗರಿಮೆಗಳ ಬಗ್ಗೆ ತಿಳಿಯಬಹುದು. ಆಗಸ್ಟ್ 15ರ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡಲಾಗುತ್ತದೆ. ಹೀಗಾಗಿ ಎಲ್ಲರೂ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಜಿಲ್ಲಾಧಿಕಾರಿಗಳಾದ ದಿವ್ಯಪ್ರಭು ಅವರು ಮಾತನಾಡಿ, ಜಿಲ್ಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ವಿನೂತನವಾಗಿ ಆಚರಣೆ ಮಾಡಲಾಗುತ್ತಿದೆ. ದೇಶದ ಹೆಮ್ಮೆ, ಪರಂಪರೆಯ ಬಗ್ಗೆ ಯುವಕರಿಗೆ ತಿಳಿಸುವ ನಿಟ್ಟಿನಲ್ಲಿ ಪಾರಂಪರಿಕ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ತ್ಯಾಗ ಮಾಡಿದ ಹೋರಾಟಗಾರರನ್ನು ಸ್ಮರಿಸಬೇಕಿದೆ. ನಮ್ಮ ಊರಿನ ಹೆಮ್ಮೆಯ ಬಗ್ಗೆ ತಿಳುವಳಿಕೆ ನೀಡುವುದು ಅವಶ್ಯಕವಾಗಿದೆ. ಇಂದು ನಡೆದ ಪಾರಂಪರಿಕ ನಡಿಗೆಯಲ್ಲಿ ವಿವಿಧ ಶಾಲೆಗಳ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿಯಾಗಿ ಯಶಸ್ವಿಗೊಳಿಸಿದರು. ಭಾರತ ದೇಶವು ಇಂದು ವಿವಿಧ ಕ್ಷೇತ್ರಗಳಲ್ಲಿ ಮುಂದಿದೆ. ದೇಶವು ವೈಜ್ಞಾನಿಕ, ತಂತ್ರಜ್ಞಾನ ಕ್ಷೇತ್ರದಲ್ಲಿ ಅಪಾರ ಮುನ್ನಡೆಯನ್ನು ಸಾಧಿಸಿದೆ ಎಂದು ಅವರು ತಿಳಿಸಿದರು.
ನಾರಾಯಣ ಡೋಣಿ ಅವರ ಮನೆತನದ ಕಂಡೋಬಾ ಡೋಣಿ ಅವರಿಗೆ ಗಣ್ಯರು ಮಾಲಾರ್ಪಣೆ ಮಾಡಿ, ಗೌರವಿಸಿದರು. ಪಾರಂಪರಿಕ ನಡಿಗೆ ಮಾರ್ಗದಲ್ಲಿನ ವಿವಿಧ ಮಹಾತ್ಮರ, ಸ್ವಾತಂತ್ರ್ಯ ಹೋರಾಟಗಾರ ಪ್ರತಿಮೆಗಳಿಗೆ ಗಣ್ಯರು ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು.
ಪಾರಂಪರಿಕ ನಡಿಗೆಯು ವಿದ್ಯಾನಗರದ ಮಹಿಳಾ ವಿದ್ಯಾಪೀಠದಿಂದ ಆರಂಭವಾಗಿ ಕಿತ್ತೂರು ಚೆನ್ನಮ್ಮ ವೃತ್ತ, ಮಹಾನಗರ ಪಾಲಿಕೆ, ಅಂಬೇಡ್ಕರ್ ವೃತ್ತ, ಕೊಪ್ಪಿಕರ ರಸ್ತೆ, ಬ್ರಾಡ್ವೆ ಮಾರ್ಗದ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಭಾರತ ಬಿಟ್ಟು ತೊಲಗಿ ಚಳುವಳಿಯಲ್ಲಿ ಬಲಿದಾನವಾದ ಬಾಲಕ ನಾರಾಯಣ ದೋಣಿ ಅವರ ಸ್ಮಾರಕಕ್ಕೆ ಗೌರವ ಸಲ್ಲಿಸುವ ಮೂಲಕ ಮುಕ್ತಾಯಗೊಂಡಿತು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಮಹಾಪೌರರಾದ ರಾಮಣ್ಣ ಬಡಿಗೇರ, ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ,
ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹುಬ್ಬಳ್ಳಿ ಶಹರ ತಹಶೀಲ್ದಾರ ಕೆ.ಆರ್.ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಪ್ರಕಾಶ ನಾಶಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಬೊಮ್ಮಕ್ಕನವರ, ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ್ರ, ಜಾನಪದ ತಜ್ಞ ಡಾ.ರಾಮು ಮೂಲಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.