ರಾಜೀವಗಾಂಧಿ ವಿಶ್ವವಿದ್ಯಾಲಯದ ಕ್ರೀಡಾಕೂಟ
ಬಾಗಲಕೋಟ- ಬಿ.ವಿ.ವಿ ಸಂಘದ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಲಯಮಟ್ಟದ ಶೆಟಲ್ ಬ್ಯಾಡ್ಮಿಂಟನ್, ಚೆಸ್ ಮತ್ತು ಟೇಬಲ್ ಟೆನ್ನಿಸ್ ಕ್ರೀಡೆಗಳಲ್ಲಿ ಸಾಧನೆತೋರಿ ಪ್ರಶಸ್ತಿ ಪಡೆದಿರುವರು.
ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಚೆಸ್ ಕ್ರೀಡೆಯಲ್ಲಿ ವಿದ್ಯಾರ್ಥಿಗಳ ತಂಡ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ಕೊಪ್ಪಳದ ಗವಿಸಿದ್ಧೇಶ್ವರ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಶೆಟಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಮತ್ತು ವಿಜಯಪುರದ ಡಾ.ಬಿ.ಎನ್.ಎಮ್ ರೂರಲ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ನಡೆದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಪುರುಷರ ವಿಭಾಗದಲ್ಲಿ ದ್ವಿತೀಯ ಹಾಗೂ ಮಹಿಳಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುವರು. ಈ ಎಲ್ಲ ಕ್ರೀಡಾಕೂಟಗಳಲ್ಲಿ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ತಂಡದ ನೇತೃತ್ವವನ್ನು ದೈಹಿಕ ನಿರ್ದೇಶಕ ಡಾ.ವಿಜಯಕುಮಾರ ಹಿರೇಮಠ ಅವರು ವಹಿಸಿದ್ದರು.
ಕ್ರೀಡಾಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ವಿದ್ಯಾರ್ಥಿ/ವಿದ್ಯಾರ್ಥಿನಿಯರ ತಂಡಗಳನ್ನು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷರಾದ ಡಾ.ವೀರಣ್ಣ ಸಿ.ಚರಂತಿಮಠ, ಬಿ.ವಿ.ವಿ ಸಂಘದ ಗೌರವ ಕಾರ್ಯದರ್ಶಿಗಳಾದ ಮಹೇಶ ಎನ್.ಅಥಣಿ, ಬಿ.ವಿ.ವಿ.ಸಂಘದ ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷರಾದ ಅಶೋಕ ಎಮ್.ಸಜ್ಜನ (ಬೇವೂರ), ಮೆಡಿಕಲ್ ಕಾಲೇಜ್ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ, ವೈದ್ಯಕೀಯ ಅಧೀಕ್ಷಕರಾದ ಡಾ.ಶ್ರೀರಾಮ ಕೋರಾ ಮತ್ತು ಡಾ.ಸಂತೋಷ ಶೀಲವಂತ ಅಭಿನಂದಿಸಿದ್ದಾರೆ.