ಕೊಪ್ಪಳ ಆಗಸ್ಟ್ 18 : ಕೊಪ್ಪಳ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮಗುವಿಗೂ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿಯ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದ ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿಯಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಮಗು ಜನಿಸಿದ 24 ಗಂಟೆಯೊಳಗೆ ಹಾಕಬೇಕಾದ ಕಡ್ಡಾಯ ಲಸಿಕೆಗಳು, ಮಗುವಿನ ಬೆಳವಣಿಗೆಯ ವಿವಿಧ ಹಂತಗಳಲ್ಲಿ ಹಾಕಬೇಕಾದ ಲಸಿಕೆಗಳಿಂದ ಜಿಲ್ಲೆಯ ಯಾವುದೇ ಮಗು ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಲಸಿಕೆಯಿಂದ ಮಗುವಿಗೆ ಆಗುವ ಆರೋಗ್ಯ ಪ್ರಯೋಜನೆಗಳು ಮತ್ತು ಲಸಿಕೆ ಹಾಕಿಸದೇ ಇರುವುದರಿಂದ ಆಗುವ ತೊಂದರೆಗಳು ಸೇರಿದಂತೆ ನಾನಾ ವಿಷಯಗಳ ಕುರಿತು ಎಲ್ಲಾ ತಾಯಂದಿರಿಗೆ ಗೊತ್ತಿರಬೇಕು. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಮಗುವಿನ ಆರೋಗ್ಯದ ಬಗ್ಗೆ ಅತಿ ಹೆಚ್ಚಿನ ಕಾಳಜಿ ವಹಿಸಲು ಮತ್ತು ನಿಗದಿತ ಸಮಯಕ್ಕೆ ಲಸಿಕೆ ಹಾಕುವಂತೆ ಆಯಾ ಮಗುವಿನ ಪಾಲಕರಿಗೆ ಸ್ಥಳೀಯವಾಗಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರ ಮೂಲಕ ಸೂಕ್ತ ಸಮಯದಲ್ಲಿ ತಿಳಿವಳಿಕೆ ಮೂಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರ್ಹರಿರುವ ಪ್ರತಿಯೊಬ್ಬ ಮಗುವಿಗೂ ಲಸಿಕೆ ಹಾಕಿಸಲು ಕ್ರಮ ಕೈಗೊಳ್ಳುವ ಕಾರ್ಯಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಮತ್ತು ಸಂಬಂಧಿಸಿದ ಇತರೆ ಇಲಾಖೆಯವರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಪ್ರಾಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವಿಂದ್ರನಾಥ ಎಂ.ಹೆಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ್, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕುಮಾರಸ್ವಾಮಿ ಗೋನಾಳ, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಶಶೀಧರ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಹೆಚ್., ಕಿಮ್ಸ್ ಪ್ರಾಶುಂಪಾಲರಾದ ಡಾ. ನಾರಾಯಣ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ್ ಸೇರಿದಂತೆ ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು, ತತ್ಞವೈದ್ಯರು, ವೈದ್ಯಾಧಿಕಾರಿಗಳು, ವಿವಿಧ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.