ಬೆಂಗಳೂರು, ಮೇ 20: ಬೆಂಗಳೂರು ಮಹಾನಗರದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಜಯನಗರ, ಚಾಮರಾಜಪೇಟೆ, ಬನಶಂಕರಿ, ಶಾಂತಿನಗರ, ವಿಜಯನಗರ, ಚಂದ್ರಾಲೇಔಟ್, ರಾಜಾಜಿನಗರ, ಆರ್.ಟಿ.ನಗರ, ಹೆಬ್ಬಾಳ, ಮಲ್ಲೇಶ್ವರಂ, ಕೋರಮಂಗಲ, ಕಾಮಾಕ್ಷಿಪಾಳ್ಯ, ಸುಂಕದಕಟ್ಟೆ, ನಾಗರಬಾವಿ, ಯಶವಂತಪುರ, ಪೀಣ್ಯ, ಬಿಟಿಎಂ ಲೇಔಟ್ ಸೇರಿ ಹಲವೆಡೆ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ಪೈಕಿ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಬೆಳಗ್ಗೆ ಮಳೆ ಜೋರಾಗಿದೆ. ಪರಿಣಾಮವಾಗಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಪುಟ್ಟೇನಹಳ್ಳಿ ಮುಖ್ಯರಸ್ತೆ ಕಡೆಯಿಂದ ಕೊತ್ತನೂರು ದಿನ್ನೆ ಜಂಕ್ಷನ್ ಕಡೆಗೆ ಹಾಗೂ ಹೊಸಗುಡ್ಡದಹಳ್ಳಿ ಜಂಕ್ಷನ್ ಕಡೆಯಿಂದ ಮೈಸೂರು ರಸ್ತೆ ಟೋಲ್ಗೇಟ್ ಕಡೆಗೆ. ಮಳೆನೀರು ನಿಂತಿರುವುದರಿಂದ ನಿಧಾನಗತಿಯ ಸಂಚಾರವಿರುತ್ತದೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಳೆ ಬೀಳುತ್ತಿರುವುದರಿಂದ ರೂಪೇನ ಅಗ್ರಹಾರದ ಬಳಿ ರಸ್ತೆ ಜಲಾವೃತಗೊಂಡಿದ್ದು ಹೊಸೂರು ಮುಖ್ಯ ರಸ್ತೆ ಮೂಲಕ ನಗರದ ಒಳ ಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದೆ. ಆದ್ದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸಿ ಸಹಕರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.