ನವದೆಹಲಿ/ಬೆಂಗಳೂರು: ಮಾಜಿ ಪ್ರಧಾನಿ, ಜಾಗತಿಕ ಭಾರತದ ಶಿಲ್ಪಿ ಡಾ.ಮನಮೋಹನ್ ಸಿಂಗ್(92) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ನೆರವೇರಲಿದ್ದು, ಅಂತ್ಯಕ್ರಿಯೆಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಮನಮೋಹನ್ ಸಿಂಗ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮುಡಿಯುತ್ತಿದ್ದು, ಗಣ್ಯಾತಿಗಣ್ಯರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿ ತಲುಪಿದ್ದು, ದೇಶದ ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿ ಮಾಜಿ ಪ್ರಧಾನಮಂತ್ರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರು ಮತ್ತೊಮ್ಮೆ ಅಂತಿಮ ನಮನ ಸಲ್ಲಿಸಿದರು. ಇದೀಗ ಕಾಂಗ್ರೆಸ್ ಕಚೇರಿಯಿಂದ ಮನಮೋಹನ್ ಸಿಂಗ್ ಅವರ ಅಂತಿಮ ಯಾತ್ರೆ ಆರಂಭವಾಗಿದೆ.
ಮನಮೋಹನ್ ಸಿಂಗ್ ವಯೋಸಹಜ ಕಾಯಿಲೆಯಿಂದಾಗಿ ಕೊನೆಯುಸಿರೆಳೆದಿದ್ದಾರೆ. ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿದ ನಂತರ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿತ್ತು.