ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Ravi Talawar
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
WhatsApp Group Join Now
Telegram Group Join Now
ಧಾರವಾಡ: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ ₹10 ಸಾವಿರ ಗೌರವಧನವನ್ನು ನೀಡುವುದು ಸಹಿತ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ಜಿಲ್ಲಾಘಟಕದವರು ನಗರದಲ್ಲಿ ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ‘ಅಹೋರಾತ್ರಿ ಧರಣಿ’ ನಡೆಸಿದರು.’ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಜನರನ್ನೂ ಆರೋಗ್ಯವಂತರನ್ನಾಗಿಡಲು ಶ್ರಮಿಸುತ್ತಿದ್ದಾರೆ. ಅವರ ಸೇವೆಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿರುವುದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಗೌರವ ಧನವನ್ನು ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ ಪಿಎಫ್, ಇಎಸ್‍ಐ, ಗ್ರಾಚುಟಿ ಸೇರಿದಂತೆ ಸಾಮಾಜಿಕ ಭದ್ರತೆಗಳನ್ನು ಖಚಿತಪಡಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
‘ಜನವರಿ ತಿಂಗಳಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ಪ್ರತಿ ತಿಂಗಳೂ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ₹10 ಸಾವಿರ ಗೌರವ ಧನ ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
`ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಪಾಲು ಸೇರಿ ಮಾಸಿಕ ₹10 ಸಾವಿರ ಗೌರವ ಧನ ನೀಡಬೇಕು. ಆಶಾ ಕಾರ್ಯಕರ್ತೆಯರ ಕೆಲಸದ ವ್ಯಾಪ್ತಿಯನ್ನು ಹೆಚ್ಚಳ ಮಾಡುತ್ತಿರುವ ಪ್ರಕ್ರಿಯೆಯನ್ನು ಕೈಬಿಡಬೇಕು. ಕಾರ್ಯನಿರ್ವಹಣೆ ಮೌಲಮಾಪನದ ವ್ಯವಸ್ಥೆಯು ಅವೈಜ್ಞಾನಿಕವಾಗಿದ್ದು, ಅದನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿದರು. ಸಂಘಟನೆ ಜಿಲ್ಲಾಧ್ಯಕ್ಷೆ ಭುವನಾ ಬಳ್ಳಾರಿ, ಭಾರತಿ ಶೆಟ್ಟರ್, ಸುಜಾತ ಹಿರೇಮಠ, ಶೈಲಾ ಮಧುಗಲ್, ಮಂಜುಳ ಗಾಡುಗೋಳಿ, ಸಪ್ನಾ ಸುಳ್ಳದ್, ರಾಜೇಶ್ವರಿ ಕೋರಿ, ನಂದಾ ದೊಡ್ಡಮನಿ, ಗೀತಾ ಸೂರ್ಯವಂಶಿ, ಜ್ಯೋತಿ ಶಾಂತಪ್ನವರ, ಸಂಗೀತ ಗೋರೋವನಕೊಳ ಪಾಲ್ಗೊಂಡಿದ್ದರು.
WhatsApp Group Join Now
Telegram Group Join Now
Share This Article