ನವದೆಹಲಿ,18: ಕಿರ್ಗಿಸ್ತಾನದಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ವಿದ್ಯಾರ್ಥಿಗಳು ಮನೆಯೊಳಗೆ ಇರುವಂತೆ ಭಾರತ ಮನವಿ ಮಾಡಿದೆ. ಹಲವಾರು ಪಾಕಿಸ್ತಾನಿ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ನಲ್ಲಿ ಹಿಂಸಾಚಾರದಲ್ಲಿ ಗಾಯಗೊಂಡಿದ್ದು, ಭಾರತೀಯ ವಿದ್ಯಾರ್ಥಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಪರಿಸ್ಥಿತಿಯ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಭಾರತಿಯ ರಾಯಭಾರ ಕಚೇರಿ, ನಾವು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ, ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ. ಆದರೆ ವಿದ್ಯಾರ್ಥಿಗಳು ಸದ್ಯಕ್ಕೆ ಮನೆಯೊಳಗೆ ಇರಲು ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡಲಾಗಿದೆ ಎಂದು ತಿಳಿಸಿದೆ. ಎಕ್ಸ್ ಪೋಸ್ಟ್ ಮೂಲಕ ಸಹಾಯವಾಣಿ ಸಂಖ್ಯೆಯನ್ನೂ 0555710041 ಹಂಚಿಕೊಂಡಿದ್ದಾರೆ.
ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ಭಾರತೀಯ ವಿದ್ಯಾರ್ಥಿಗಳಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸಲಹೆ ನೀಡಿದ್ದಾರೆ. ಕಿರ್ಗಿಸ್ತಾನದ ರಾಜಧಾನಿ ಬಿಷ್ಕೆಕ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿದು ಬಂದಿದೆ. ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ ಎಂದು ಜೈಶಂಕರ್ ಹೇಳಿದರು.