ಹಾಸನ, ಮೇ 14: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಲಿಖಿತ್ ಗೌಡ, ಚೇತನ್ ಜಾಮೀನುಅರ್ಜಿ ವಜಾಗೊಂಡಿದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಾದ ಲಿಖಿತ್, ಚೇತನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (ಇಂದು (ಮೇ 14) ಹಾಸನದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯ ವಜಾ ಮಾಡಿ ಆದೇಶ ಹೊರಡಿಸಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಮಾಜಿ ಬಿಜೆಪಿ ಶಾಸಕ ಪ್ರೀತಂಗೌಡ ಅವರ ಆಪ್ತರು ಎನ್ನಲಾದ ಲಿಖಿತ್ ಗೌಡ, ಚೇತನ್ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ 12ರಂದು ಬಂಧಿಸಿದ್ದರು. ಬಳಿಕ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೀಗ ಆರೋಪಿಗಳ ಜಾಮೀನು ಅರ್ಜಿ ಸಹ ವಜಾಗೊಂಡಿದೆ.
ಮತ್ತೊಂದೆಡೆ ಸಂತ್ರಸ್ತೆಯನ್ನು ಅಪಹರಣ ಮಾಡಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಜೈಲು ಸೇರಿದ್ದ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ(ಮೇ 13) ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿತ್ತು. ಆದ್ರೆ, ನಿನ್ನೆ ಸಮಯ ಆಗಿದ್ದರಿಂದ ಇಂದು (ಮೇ 14) ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಇದರಿಂದ ಜೆಡಿಎಸ್ ಮುಖಂಡರು, ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಸದ್ಯ ರೇವಣ್ಣ ಅವರು ಜೈಲಿನಿಂದ ನೇರವಾಗಿ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ನಿವಾಸಕ್ಕೆ ತೆರಳಿದ್ದಾರೆ.