ನವದೆಹಲಿ, ಅಕ್ಟೋಬರ್ 18: ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಇದರೊಂದಿಗೆ, ಭವಾನಿ ರೇವಣ್ಣ ನಿರಾಳರಾಗುವಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದಿತು.
ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆ ಕಿಡ್ನ್ಯಾಪ್ ಆರೋಪ ಸಂಬಂಧ ಭವಾನಿ ರೇವಣ್ಣಗೆ ಜಾಮೀನು ನೀಡಬಾರದು ಎಂದು ಎಸ್ಐಟಿ ಪರ ವಕೀಲರು ವಾದ ಮಂಡಿಸಿದ್ದಾರೆ. ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು. ಹೈಕೋರ್ಟ್ ನೀಡಿರುವ ನಿರಿಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಸುಪ್ರೀಂ ಕೋರ್ಟ್ನಲ್ಲಿ ಎಸ್ಐಟಿ ಅಧಿಕಾರಿಗಳ ಪರ ವಕೀಲರು ವಾದ ಮಂಡಿಸಿದ್ದಾರೆ.
ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆರೋಪಿ ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ. ಪ್ರತಿಷ್ಠಿತ ರಾಜಕೀಯ ಕುಟುಂಬ ಎಂದು ಜಾಮೀನು ರದ್ದು ಮಾಡಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.