ಬೆಂಗಳೂರು: ಸೋಮವಾರದಿಂದ ಆರಂಭಗೊಳ್ಳಲಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಉಭಯ ಸದನದಲ್ಲಿಯೂ ಸರ್ಕಾರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಸಂಬಂಧ ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನೊಳಗೊಂಡ ಸಮನ್ವಯ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಭೆಗೆ ಗೈರಾಗಿದ್ದರು.
ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ, ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಸೇರಿದಂತೆ ಹಲವರು ಭಾಗಿಯಾಗಿದ್ದರು. ಆದರೆ, ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗೈರುಹಾಜರಿ ಎದ್ದುಕಾಣುತ್ತಿತ್ತು. ಅವರ ಅನುಪಸ್ಥಿತಿಯಲ್ಲಿಯೇ ಬಿಜೆಪಿ – ಜೆಡಿಎಸ್ ಸದಸ್ಯರು ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಸಾಂಘಿಕ ಹೋರಾಟ ನಡೆಸಬೇಕು. ಎನ್ಡಿಎ ಕೂಟವಾಗಿ ಎರಡೂ ಪಕ್ಷಗಳನ್ನು ಸಮರ್ಥನೆ ಮಾಡಿಕೊಳ್ಳಬೇಕು ಎನ್ನುವ ನಿರ್ಧಾರ ಕೈಗೊಳ್ಳಲಾಯಿತು.
ಸಭೆ ನಂತರ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಅಧಿವೇಶನದಲ್ಲಿ ಮೊದಲ ಬಾರಿಗೆ ಎನ್ಡಿಎ ಜಂಟಿಯಾಗಿ ಸರ್ಕಾರಕ್ಕೆ ಬಿಸಿ ಮುಟ್ಟುವ ಕೆಲಸ ಮಾಡಬೇಕಿದೆ. ಎಲ್ಲ ವಿಚಾರಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಶಕ್ತಿ ಸಿಕ್ಕಿದೆ. ಮುಡಾ ಹಗರಣದಲ್ಲಿ ಸಿಎಂ ಭಾಗಿಯಾಗಿರುವುದರಿಂದ ಇದು ದೇಶದ ವಿಚಾರವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರವನ್ನು ಬಟಾಬಯಲು ಮಾಡುತ್ತೇವೆ. ಸಿಎಂ ಹತ್ತು ವರ್ಷ ನಾನು ಜಮೀನೇ ನೋಡಿಲ್ಲ ಅನ್ನೋದು ಸಂಶಯಾಸ್ಪದವಾಗಿದ್ದು, ಉಭಯ ಸದನಗಳಲ್ಲಿ ಪರಿಣಾಮಕಾರಿ ಹೋರಾಟ ನಡೆಸಲಿದ್ದೇವೆ ಎಂದರು.
ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯವು ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ. ವಿಧಾನ ಕಲಾಪದಲ್ಲಿ ಸರ್ಕಾರದ ವಿರುದ್ಧ ಜೆಡಿಎಸ್ ಬಿಜೆಪಿ-ಜಂಟಿ ಹೋರಾಟ ನಡೆಸಲಿವೆ ಎಂದು ತಿಳಿಸಿದರು. ಅಂಕಿ – ಅಂಶ, ಹಗರಣಗಳನ್ನು ಉಲ್ಲೇಖಿಸಿ ಅವರು ರಾಜ್ಯ ಸರ್ಕಾರದ ವಿರುದ್ಧ ಪ್ರಹಾರ ನಡೆಸಿದರು.