ಬೆಂಗಳೂರು/ಬೆಳಗಾವಿ: ಸಂವಿಧಾನ ಬದಲು ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆಯು ಕಾಂಗ್ರೆಸ್, ರಾಹುಲ್ ಗಾಂಧಿ, ಸಿದ್ದರಾಮಯ್ಯ ಅವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ಕಿಡಿಕಾರಿದೆ.
ಕಲಬುರಗಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಡಿಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಮುಸಲ್ಮಾನರ ಹಿತಕ್ಕಾಗಿ ಸಂವಿಧಾನಕ್ಕೆ ವಿರುದ್ಧವಾಗಿ ಮೀಸಲಾತಿ ನೀಡಿದ್ದಾಯ್ತು. ಈಗ ಮುಸಲ್ಮಾನರ ಏಳಿಗೆಗಾಗಿ ಸಂವಿಧಾನವನ್ನೆ ಬದಲಾಯಿಸುತ್ತೇವೆ ಡಿಸಿಎಂ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಓಲೈಕೆ ಹಾಗೂ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ನಾಳೆ ಭಾರತವನ್ನೇ ತುಂಡರಿಸುತ್ತದೆ ಎಂಬುದಕ್ಕೆ ಡಿ.ಕೆ.ಶಿವಕುಮಾರ್ ಅವರ ಈ ಹೇಳಿಕೆಯೇ ಸಾಕ್ಷಿ ಎಂದು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, “ಭಾರತದ ಪ್ರಜಾತಂತ್ರ ವ್ಯವಸ್ಥೆಯ ಸಾರ್ವಭೌಮ ಎಂದು ಗೌರವಿಸುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನೇ ತಿದ್ದುಪಡಿ ಮಾಡಿದರೂ ಸರಿ ಮುಸ್ಲಿಮರಿಗೆ ಮೀಸಲಾತಿ ನೀಡುವುದೇ ನಮ್ಮ ಪ್ರಥಮ ಆದ್ಯತೆ, ದೇಶ, ಸಂವಿಧಾನಕ್ಕಿಂತ ಮುಸ್ಲಿಮರಿಗೆ ಮೀಸಲಾತಿ ಕೊಡುವುದು ನಮ್ಮ ಕರ್ತವ್ಯ” ಎಂಬ ಅರ್ಥದಲ್ಲಿ ರಾಷ್ಟ್ರೀಯ ವಾಹಿನಿಯೊಂದರ ಸಂದರ್ಶನದಲ್ಲಿ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕಾಂಗ್ರೆಸ್ ನ ಮುಖ್ಯ ಅಜೆಂಡಾ ಏನು ಎಂಬುದನ್ನು ಬಹಿರಂಗಪಡಿಸಿದ್ದಾರೆಂದು ಹೇಳಿದ್ದಾರೆ.