ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಪ್ರಸಿದ್ಧ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ತೀರ್ಥಯಾತ್ರೆ ಪುನರುಜ್ಜೀವನ ಮತ್ತು ಆಧ್ಯಾತ್ಮಿಕ ಪರಂಪರೆ ವೃದ್ಧಿ ಡ್ರೈವ್(ಪ್ರಸಾದ್) ಯೋಜನೆಯಡಿ ಅಭಿವೃದ್ಧಿ ಮಾಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.
ಈ ನಿರ್ಧಾರವನ್ನು ಸ್ವಾಗತಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ಹೇಳಿದ್ದಾರೆ.
“ಪ್ರಸಾದ್ ಯೋಜನೆಯಡಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಂಸ್ಕೃತಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು.
ಈ ಉಪಕ್ರಮವು ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯಗಳನ್ನು ಒದಗಿಸುತ್ತದೆ” ಎಂದು ಬೊಮ್ಮಾಯಿ ಹೇಳಿದ್ದಾರೆ.
“ಇಂದು, ನಮ್ಮ ಪ್ರವಾಸೋದ್ಯಮ ಸಚಿವಾಲಯವು ಕರ್ನಾಟಕದ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯವನ್ನು ಪ್ರಶಾದ್ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲು ಅನುಮೋದಿಸಿದೆ” ಎಂದು ಸಚಿವ ಶೇಖಾವತ್ ಸಾಮಾಜಿಕ ಮಾಧ್ಯಮ X ನಲ್ಲಿ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರವು ಪ್ರಸಾದ್ ಯೋಜನೆಯಲ್ಲಿ 18.37 ಕೋಟಿ ರೂ. ಅನುದಾನವನ್ನು ಕರ್ನಾಟಕದ ಬೆಳಗಾವಿಯ ಸವದತ್ತಿ ದೇಗುಲಕ್ಕೆ ನೀಡಲು ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವರು ತಿಳಿದ್ದಾರೆ.
18.37 ಕೋಟಿ ರೂ. ಅನುದಾನದಲ್ಲಿ ದೇವಾಲಯಕ್ಕೆ ಭಕ್ತಾಧಿಗಳ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದು ದೇವಾಲಯಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.