ಬೆಂಗಳೂರು/ನವದೆಹಲಿ: ಧರ್ಮಸ್ಥಳದ ವಿಚಾರವಾಗಿ ಷಡ್ಯಂತ್ರ ನಡೆಯುತ್ತಿದೆ. ಇದರ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂಬ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಿದ್ದೇವೆ. ಎಲ್ಲ ವಿಚಾರಗಳನ್ನೂ ಅವರು ಆಲಿಸಿದ್ದಾರೆ. ಅವರ ಗಮನಕ್ಕೆ ತರುವ ಕೆಲಸವನ್ನು ಬಿಜೆಪಿ ನಿಯೋಗ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸೋಮವಾರ ರಾತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿರೋಧ ಪಕ್ಷದ ನಾಯಕರುಗಳಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಧರ್ಮಸ್ಥಳ ಚಲೋ ಉಸ್ತುವಾರಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್, ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಸತೀಶ್ ಕುಂಪಲ ಅವರನ್ನು ಒಳಗೊಂಡ ಎಲ್ಲ ರಾಜ್ಯ ಬಿಜೆಪಿ ನಿಯೋಗ ಗೃಹ ಸಚಿವರನ್ನು ಭೇಟಿ ಮಾಡಿದ್ದೇವೆ ಎಂದು ಹೇಳಿದರು.