ಧಾರವಾಡ: ಹುಬ್ಬಳ್ಳಿ- ಧಾರವಾಡವನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ ಮಾಡಿದೆ. ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆದಿದೆ. ಧಾರವಾಡ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಗಿದೆ.
ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಂಪುಟ ನಿರ್ಧಾರ
2014ರಲ್ಲೇ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜನೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿತ್ತು. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕೆಂದು ಧಾರವಾಡದ ಜನರು ಆಗ್ರಹಿಸಿದ್ದರು. ಪಾಲಿಕೆಯ ರಚನೆಗೆ 3.5 ಲಕ್ಷ ಜನಸಂಖ್ಯೆಯ ಮೇಲಿರಬೇಕು. ಹೀಗಾಗಿ, ಇದೀಗ ಧಾರವಾಡವನ್ನು ಪ್ರತ್ಯೇಕ ಮಹಾನಗರ ಪಾಲಿಕೆಯಾಗಿ ಘೋಷಿಸಲು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.