ಬಳ್ಳಾರಿ: 04.:.ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಛಾರ್ಜ್‌ಶೀಟ್ ಅನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ತಿರಸ್ಕರಿಸಿರುವುದಾಗಿ ಆಮ್ ಆದ್ಮಿ ಪಕ್ಷ ತಿಳಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಪಕ್ಷದ ಬಳ್ಳಾರಿ ಜಿಲ್ಲಾಧ್ಯಕ್ಷ ಜೆ.ವಿ. ಮಂಜುನಾಥ್ ಅವರು, ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ವಿರುದ್ಧದ ಆರೋಪಗಳು ನ್ಯಾಯಾಲಯದಲ್ಲಿ ತಳ್ಳಿಹಾಕಲ್ಪಟ್ಟಿರುವುದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದ್ದಾರೆ.
ಕಳೆದ ಮೂರು ವರ್ಷಗಳಿಂದ ಪಕ್ಷ ಹಾಗೂ ನಾಯಕರ ವಿರುದ್ಧ ವಿವಿಧ ರೀತಿಯ ಟೀಕೆ ಮತ್ತು ಆರೋಪಗಳು ಕೇಳಿಬಂದಿದ್ದವು. ರಾಜಕೀಯ ಉದ್ದೇಶಗಳಿಂದ ಈ ಪ್ರಕರಣ ಸೃಷ್ಟಿಸಲಾಗಿತ್ತು ಎಂಬುದು ಇದೀಗ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.
ಈ ಬೆಳವಣಿಗೆ ಭ್ರಷ್ಟಾಚಾರ ಮತ್ತು ಕೋಮುವಾದಿ ರಾಜಕೀಯದ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಪ್ರೇರಣೆ ನೀಡಲಿದೆ. ಸ್ವಚ್ಛ ಆಡಳಿತದ ಮೂಲಕ ರಾಜಕೀಯ ನಡೆಸುವ ಮಾದರಿಯನ್ನು ಆಮ್ ಆದ್ಮಿ ಪಕ್ಷ ಈಗಾಗಲೇ ತೋರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭ್ರಷ್ಟಾಚಾರಮುಕ್ತ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕಾಗಿ ಜನರು ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ


