ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ತಾವು ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜ್ಯದಲ್ಲಿ ಕೂಡಲೇ ಡೆಂಗ್ಯು ನಿಯಂತ್ರಣಕ್ಕೆ ತರದಿದ್ದರೆ ಮೇಲಿನ ಅಧಿಕಾರಿಗಳ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಠಿಣ ಎಚ್ಚರಿಕೆ ನೀಡಿದರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು.
ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ. ಜಿಲ್ಲಾಧಿಕಾರಿಗಳಿಗೆ ತಾವು ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8234 ಪ್ರಕರಣಗಳು ಬಾಕಿ ಇವೆ. ಉಪವಿಭಾಗಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7522 ಪ್ರಕರಣಗಳಿವೆ, DCಗಳ ಬಳಿ 10838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್ಗಳಿಗೆ ಏನು ಸೂಚನೆ ಕೊಡ್ತೀರಿ ಎಂದು ಖಾರವಾಗಿ ಪ್ರಶ್ನಿಸಿದರು. ಕೆಲವು DCಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DCಗಳಿಂದ ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.