ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶಾಸಕರು, ಸಚಿವರು ಮತ್ತು ಉನ್ನತ ಅಧಿಕಾರಿಗಳೊಂದಿಗೆ ಬುಧವಾರ ದಿಢೀರ್ ಸಭೆ ನಡೆಸಿದ್ದು, ಸಭೆಯಲ್ಲಿ ನಗರದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಸರ್ಕಾರ ಮಹತ್ವಕಾಂಕ್ಷಿ ಯೋಜನೆಯಾದ ಸ್ಕೈಡೆಕ್ ನಿರ್ಮಾಣ, ಸುರಂಗ ರಸ್ತೆ ನಿರ್ಮಾಣ, ಘನ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ, ಹೈ ಡೆನ್ಸಿಟಿ ಕಾರಿಡಾರ್ ಅಭಿವೃದ್ಧಿ ಹಾಗೂ ಪೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ಮೊದಲಾದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ನಾಲ್ಕೈದು ಬಾರಿ ಟೆಂಡರ್ ಕರೆದರು ವಿಫಲವಾಗಿರುವುದರಿಂದ ಪರಿಸರಲ್ ರಿಂಗ್ ರಸ್ತೆ ಅಭಿವೃದ್ಧಿಗೆ ವಿವಿಧ ಸಾಧ್ಯತೆಗಳು ಹಾಗೂ ಸಂಪನ್ಮೂಲ ಕ್ರೋಡೀಕರಣದ ಅವಕಾಶಗಳನ್ನು ಪರಿಶೀಲಿಸಿ ವಿವರವಾದ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.