ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Ravi Talawar
ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸಿದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ. ಕಳೆದ 10 ದಿನಗಳಲ್ಲಿ 5 ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 11 ಸಾವುಗಳು ಸಂಭವಿಸಿವೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಈ ವೇಳೆ, ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದರು.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ನಿರ್ದೇಶನ ನೀಡಿದರು.

WhatsApp Group Join Now
Telegram Group Join Now
Share This Article