ಜೂನ್ ಅಂತ್ಯದ ವೇಳೆಗೆ ಟೆಂಡರ್ ಪ್ರಕ್ರಿಯೆ ಶೀಘ್ರ: ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

Ravi Talawar
ಜೂನ್ ಅಂತ್ಯದ ವೇಳೆಗೆ  ಟೆಂಡರ್ ಪ್ರಕ್ರಿಯೆ ಶೀಘ್ರ: ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
WhatsApp Group Join Now
Telegram Group Join Now

ಬೆಂಗಳೂರು: ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಅಂತ್ಯದ ವೇಳೆಗೆ ಆದೇಶ ಹೊರಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಕಾಲರಾ ಅಥವಾ ಇನ್ನಿತರ ಸಾಂಕ್ರಾಮಿಕಗಳು ಕಂಡು ಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಅಧಿಕಾರಿಗಳೊಂದಿಗೆ ಆಯಾ ಜಿಲ್ಲೆಯ ಸ್ಥಿತಿಗತಿಯ ಮಾಹಿತಿ ಪಡೆದುಕೊಂಡು, ಅಗತ್ಯ ಸಲಹೆ ಸೂಚನೆ ನೀಡಿದರು.

ನಂತರ ಜಿಲ್ಲಾಡಳಿತಗಳನ್ನುದ್ದೇಶಿಸಿ ಮಾತನಾಡಿದ ಸಿಎಂ, ಈಗ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ 6ರ ವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ಬಜೆಟ್ ಘೋಷಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು. ಚುನಾವಣೆ ಮುಗಿದಿದೆ, ನೀತಿ ಸಂಹಿತೆ ಸಡಿಲವಾಗಿದೆ. ಹೀಗಾಗಿ, ಅಧಿಕಾರಿಗಳು ಅಭಿವೃದ್ಧಿ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಿಎಂ ಸೂಚಿಸಿದರು.

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ. ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತಕ್ಕೆ ಲಕ್ವ ಹೊಡೆದಂತಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳೂ ಚುನಾವಣಾಧಿಕಾರಿಗಳಾಗಿದ್ದರು. ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರಿಂದ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲು ಸಾಧ್ಯವಾಗಿರಲಿಲ್ಲ. ಮೇ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಬಿತ್ತನೆ ಕೆಲಸವೂ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಗುರಿ ಇರುವುದು 2.95 ಲಕ್ಷ ಹೆಕ್ಟೇರ್‌ ಪ್ರದೇಶ, ಆದರೆ 68,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಇನ್ನೂ 13 ದಿನ ಬಾಕಿ ಇದೆ. ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದು, ಕೃಷಿ ಚಟುವಟಿಕೆಗೆ ಪೂರಕ ಕ್ರಮಕ್ಕೆ ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.

ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಪ್ರಾರಂಭಿಸಬೇಕು. ಫೆಬ್ರವರಿಯಲ್ಲಿ ಬಜೆಟ್‌ ಮಂಡಿಸಲಾಗಿದೆ. ಆರ್ಥಿಕ ವರ್ಷದ ಎರಡು ತಿಂಗಳು ಕಳೆದು ಹೋಗುತ್ತಿದೆ. ಒಂದು ವರ್ಷದಲ್ಲಿ ಮಾಡುವ ಕೆಲಸವನ್ನು 10 ತಿಂಗಳಲ್ಲಿ ಮಾಡಿ ಮುಗಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯದರ್ಶಿಗಳ ಸಭೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

 

WhatsApp Group Join Now
Telegram Group Join Now
Share This Article