ಮೈಸೂರು, ಆಗಸ್ಟ್ 28: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಕಂಟಕ ತಪ್ಪುತ್ತಲೇ ಇಲ್ಲ. ಒಂದೆಡೆ, ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲೇ ಇದೀಗ ಮೈಸೂರಿನಲ್ಲಿ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ. ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.
ಸಿಎಂ ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆಯೇ ದೂರು ದಾಖಲಾಗಿದೆ. ಪತ್ರದಲ್ಲಿರುವ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.