ಧಾರವಾಡ: ಧಾರವಾಡ: ರಸ್ತೆ ಗುಂಡಿ ಮುಚ್ಚುವ ವಿಚಾರವಾಗಿ ಬಿಜೆಪಿ ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಸ್ತೆ ಗುಂಡಿಗಳನ್ನು ಮುಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಧಾರವಾಡದಲ್ಲೂ ಬಿಜೆಪಿ ಕಾರ್ಯಕರ್ತರು ಎಲ್ಇಎ ಕ್ಯಾಂಟೀನ್ ಮುಂಭಾಗದ ರಸ್ತೆಯಲ್ಲಿ ಗುಂಡಿ ಮುಚ್ಚುವ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಮಹಾನಗರ ಪಾಲಿಕೆಗೆ ಬರಬೇಕಾದ ಅನುದಾನವನ್ನೂ ರಾಜ್ಯ ಸರ್ಕಾರ ನೀಡದೇ ಕೇವಲ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಅನುದಾನವನ್ನು ಬಳಕೆ ಮಾಡಿಕೊಳ್ಳುತ್ತಿದೆ.
ರಸ್ತೆಗಳ ಅಭಿವೃದ್ಧಿ ಈ ಸರ್ಕಾರದಲ್ಲಿ ಆಗಿಲ್ಲ. ಪಾಲಿಕೆಗೆ ಬರಬೇಕಿರುವ 300 ಕೋಟಿ ಅನುದಾನವನ್ನೂ ಈ ರಾಜ್ಯ ಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ. ಗ್ಯಾರಂಟಿ ಯೋಜನೆಯಿಂದ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.


