ಬೆಂಗಳೂರು ಏಪ್ರಿಲ್ 11: ಮೊದಲ ಹಂತದ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಂತೆಯೇ, ರಾಜ್ಯದಲ್ಲಿ ಪ್ರಚಾರದ ಅಖಾಡ ರಂಗೇರಿದ್ದು, ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ, ಸಭೆ, ಸಮಾರಂಭಗಳಲ್ಲಿ ತೊಡಗಿಸಿಕೊಂಡಿವೆ.
ನಗರದಲ್ಲಿಂದು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಹಿರಿಯ ಸಂಸದ ರಾಹುಲ್ ಗಾಂಧಿ ಅವರ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ ಎಂಬುದನ್ನು ಕಾಂಗ್ರೆಸ್ ಮರೆತಿದೆ ಎಂದು ಟೀಕಿಸಿದರು.
“ಕಾಂಗ್ರೆಸ್ಗೆ ವಿಶ್ವಾಸಾರ್ಹ ನಾಯಕತ್ವ ಮತ್ತು ಸಾಧನೆಗಳ ಕೊರತೆಯಿದೆ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಅನುದಾನಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಎತ್ತುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯುತ್ತಿದೆ. ಆ ಮೂಲಕ ಅಧಿಕಾರಕ್ಕೆ ಬರುತ್ತೇವೆ ಎಂಬುದು ಅವರ ಭ್ರಮೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ಕಳೆದ 10 ವರ್ಷಗಳ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಗಳ ಆಧಾರದ ಮೇಲೆ ನಾವು ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದು ಅವರು ಹೇಳಿದರು. 2014ರಲ್ಲಿ 15.54 ಕೋಟಿ ಇದ್ದ ಭವಿಷ್ಯ ನಿಧಿ ಖಾತೆಗಳ ಸಂಖ್ಯೆ 2022ರಲ್ಲಿ 22.5 ಕೋಟಿಗೆ ಏರಿದೆ ಎಂದು ಕಾಂಗ್ರೆಸ್ ಯಾವುದೇ ಮಾಹಿತಿ ಇಲ್ಲದೆ ಎರಡು ಕೋಟಿ ಉದ್ಯೋಗ ಸೃಷ್ಟಿಯನ್ನು ಪ್ರಶ್ನಿಸುತ್ತಿದೆ ಎಂದು ಆರೋಪಿಸಿದರು. ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಏಳು ಕೋಟಿ ಹೊಸ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಯಡಿಯೂರಪ್ಪ ಹೇಳಿದರು.