11 ಮಸೂದೆಗಳನ್ನು ವಾಪಸ್‌ ಕಳುಹಿಸಿರುವ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ಶಾಸಕರು ಕಾನೂನು ಹೋರಾಟದ ಎಚ್ಚರಿಕೆ

Ravi Talawar
11 ಮಸೂದೆಗಳನ್ನು ವಾಪಸ್‌ ಕಳುಹಿಸಿರುವ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ಶಾಸಕರು ಕಾನೂನು ಹೋರಾಟದ ಎಚ್ಚರಿಕೆ
WhatsApp Group Join Now
Telegram Group Join Now

ಬೆಂಗಳೂರು: ಉಭಯ ಸದನಗಳಲ್ಲಿ ಅಂಗೀಕಾರವಾದ 11 ಮಸೂದೆಗಳನ್ನು ವಾಪಸ್‌ ಕಳುಹಿಸಿರುವ ರಾಜ್ಯಪಾಲರ ಕ್ರಮಕ್ಕೆ ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದು, ತೀವ್ರವಾಗಿ ಖಂಡಿಸಿದ್ದಾರೆ. ಜನರ ವಿಶ್ವಾಸ ಗಳಿಸಿ, ಜನಪ್ರಿಯವಾದ ಸರ್ಕಾರದ ಕಾರ್ಯಚಟುವಟಿಕೆಗೆ ಅಡಿಗಡಿಗೂ ಅಡ್ಡಿ ಮಾಡುತ್ತಿರುವ ರಾಜ್ಯಪಾಲರ ಕ್ರಮ ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್‌, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್‌, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ ,DT ಶ್ರೀನಿವಾಸ, ಶರಣಗೌಡ ಪಾಟೀಲ್‌, ಭೀಮರಾವ್‌ ಪಾಟಿಲ. ತಿಪ್ಪಣ್ಣಾ ಕಮಕನೂರು ಅವರು ಜಂಟಿ ಪತ್ರಿಕಾ ಹೇಳಿಕೆ ನೀಡಿ, ರಾಜ್ಯಪಾಲರ ನಡೆಯನ್ನು ಖಂಡಿಸಿದ್ದಾರೆ.

ಆಗಸ್ಟ್‌ ತಿಂಗಳಲ್ಲಿ ರಾಜ್ಯಪಾಲರು 6 ಪ್ರಮುಖ ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ಒಟ್ಟು 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್‌ ಕಳಿಸಿ ವಿರೋಧ ಪಕ್ಷದ ನಾಯಕರಂತೆ ವರ್ತಿಸುತ್ತಿದ್ದಾರೆ. ಕರ್ನಾಟಕ ಸಾರ್ವಜನಿಕ ಭ್ರಷ್ಟಾಚಾರ ತಡೆ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಟೌನ್‌ ಆಂಡ್‌ ಕಂಟ್ರೀ ಪ್ಲಾನಿಂಗ್‌ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ ಪುರಸಭಗಳು ಮತ್ತು ಇತರೇ ಕೆಲವು ಕಾನೂನು ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಪ್ರದರ್ಶನ ಪ್ರಾಧಿಕಾರ ವಿಧೇಯಕ, ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕಗಳನ್ನು ರಾಜ್ಯಪಾಲರು ಇದುವರೆಗೆ ವಾಪಸ್‌ ಮಾಡಿದ್ದಾರೆ. ಈ ಕ್ರಮ ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Share This Article