ಬೆಂಗಳೂರು, ಜೂನ್ 25: ರಾಜ್ಯ ಚುನಾವಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದೆ. ನ್ಯಾಯಾಲಕ್ಕೆ ನೀಡಿದ್ದ ಭರಸವತೆಯಂತೆ ರಾಜ್ಯ ಸರ್ಕಾರ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಮೀಸಲಾತಿ ಅಂತಿಮಗೊಳಿಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಚುನಾವಣಾ ಆಯೋಗ ಸಲ್ಲಿಸದ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ, ಜು.11ಕ್ಕೆ ಮುಂದೂಡಿದೆ.
ಇದಕ್ಕೂ ಮುನ್ನ ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ವಕೀಲರು ವಾದ ಮಂಡಿಸಿದರು. ಈ ಹಿಂದೆ ಸರ್ಕಾರ ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಮೀಸಲಾತಿ ಅಂತಿಮಗೊಳಿಸಿಲ್ಲ. ಇದರಿಂದ ಸರ್ಕಾರದ ವಿರುದ್ಧ ನ್ಯಾಯಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಿದರು.
ಬಳಿಕ ಸರ್ಕಾರದ ಪರ ಹಾಜರಿದ್ದ ವಕೀಲರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಸ್ವಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಲ್ಲದೆ ಈ ಬಗ್ಗೆ ಅಡ್ವೋಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಾದ ಮಂಡಿಸಲು ಕಾಲಾವಕಾಶ ನೀಡಬೇಕೆಂದು ಕೋರಿದರು.