ಮಂಡ್ಯ, ಆಗಸ್ಟ್ 8: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಮಂಡ್ಯ ತಲುಪುತ್ತಿದ್ದಂತೆ ಸಂಘರ್ಷಕ್ಕೆ ಕಾರಣವಾಗಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಪಾದಯಾತ್ರೆಗೆ ಆಗಮಿಸಿರುವುದು ಬಿಜೆಪಿ ಜೆಡಿಎಸ್ ಕಾರ್ಯಕರ್ತರ ನಡುವಣ ಸಂಘರ್ಷಕ್ಕೆ ಕಾರಣವಾಗಿದೆ. ಬುಧವಾರ ಉಭಯ ಪಕ್ಷಗಳ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದರು. ಇದೀಗ ಗುರುವಾರ ಬೆಳಗ್ಗೆ ಪ್ರೀತಂ ಗೌಡ ಫ್ಲೆಕ್ಸ್ಗೆ ಬೆಂಕಿ ಹಚ್ಚಲಾಗಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಪ್ರೀತಂ ಗೌಡರನ್ನು ಪಾದಯಾತ್ರೆಯಿಂದ ದೂರವಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ಮಾಜಿ ಶಾಸಕ ಸಿಎಸ್ ಪುಟ್ಟರಾಜು ತಿಳಿಸಿದ್ದಾರೆ.
ಮಂಡ್ಯದಲ್ಲಿ ‘ಟಿವಿ9’ಗೆ ಹೇಳಿಕೆ ನೀಡಿದ ಪುಟ್ಟರಾಜು, ಪ್ರೀತಂ ಗೌಡರಿಗೂ ಬಿಜೆಪಿ ಜೆಡಿಎಸ್ ಮೈತ್ರಿಗೂ ಯಾವುದೇ ಸಂಬಂಧವಿಲ್ಲ. ನಮ್ಮ ಅಭಿಪ್ರಾಯವನ್ನು ಬಿಜೆಪಿ ನಾಯಕರಿಗೆ ತಿಳಿಸಿದ್ದೇವೆ. ಯಾವುದೇ ರೀತಿಯಲ್ಲೂ ಮೈತ್ರಿಗೆ ಭಂಗವಿಲ್ಲ. ಒಂದು ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಿ ಸಮಾವೇಶ ಮಾಡುತ್ತೇವೆ ಎಂದು ತಿಳಿಸಿದರು.