ಗದಗ ಜೂನ್ 6: ಜಿಲ್ಲಾದ್ಯಂತ ಈಗಾಗಲೇ ಮುಂಗಾರು ಮಳೆ ಆರಂಭವಾಗಿದೆ. ಹವಾಮಾನ ಇಲಾಖೆ ಸೂಚನೆಯಂತೆ ಪ್ರಸಕ್ತ ವರ್ಷ ಅಧಿಕ ಮಳೆಯಾಗುವ ಸಂಭವವಿದ್ದು ಅತೀವೃಷ್ಟಿ ಎದುರಾದಲ್ಲಿ ಅಧಿಕಾರಿಗಳು ಯುದ್ದೋಪಾದಿಯಲ್ಲಿ ಸಮರ್ಪಕ ನಿರ್ವಹಣೆ ಕೈಗೊಳ್ಳಬೇಕೆಂದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜರುಗಿದ ಗದಗ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅತೀವೃಷ್ಟಿಯಿಂದ ಜಿಲ್ಲೆಯ ಜನ ಜಾನುವಾರು ಜೀವ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ತಹಶೀಲ್ದಾರ ಅವರು ಅತೀವೃಷ್ಟಿ ಬಾಧಿತ ಪ್ರದೇಶಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಸಮೀಕ್ಷೆ ನಡೆಸಿ ತಾಲೂಕಾ ಹಂತದಲ್ಲಿ ಅತೀವೃಷ್ಟಿ ಸಮರ್ಪಕ ನಿರ್ವಹಣೆ ಕುರಿತಂತೆ ಹಾಗೂ ಅತೀವೃಷ್ಟಿ ನಿರ್ವಹಣೆ ಯೋಜನೆ ಬಗ್ಗೆ ಕಾಲಕಾಲಕ್ಕೆ ಸಭೆ ನಡೆಸಬೇಕು ಎಂದು ಹೇಳಿದರು.
ಗದಗ ಬೆಟಗೇರಿ ನಗರಸಭೆ ಸೇರಿದಂತೆ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿಗಳು ರಾಜಕಾಲುವೆಗಳ ಹಾಗೂ ಚರಂಡಿಗಳಲ್ಲಿನ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಅನುವು ಮಾಡಿಕೊಡಬೇಕು. ನಗರದಲ್ಲಿನ ಖಾಸಗಿ ಖಾಲಿ ಜಾಗಗಳ ಸ್ವಚ್ಛತೆಗೊಳಿಸಲು ಸಂಬಂಧಿಸಿದ ಮಾಲೀಕರಿಗೆ ಸೂಚನೆ ನೀಡಬೇಕು. ತೆರವುಗೊಳಿಸದಿದ್ದಲ್ಲಿ ದಂಡ ವಿಧಿಸುವ ಮೂಲಕ ಕಸ ವಿಲೇವಾರಿಗೆ ಮುಂದಾಗುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಮಳೆ ಪ್ರಮಾಣ ಅಧಿಕವಾದಲ್ಲಿ ಸಾಂಕ್ರಾಮಿಕ ರೋಗಗಳು ಎದುರಾಗಬಹುದು. ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ದಿನನಿತ್ಯ ಕುಡಿಯಲು ಬಳಸುವ ನೀರನ್ನು ಕುದಿಸಿ, ಆರಿಸಿ ಕುಡಿಯಲು ಉಪಯೋಗಿಸುವಂತೆ ತಿಳಿಹೇಳಬೇಕು. ಸಾರ್ವಜನಿಕರ ದೂರುಗಳಿಗೆ ಆಸ್ಪದ ನೀಡದಂತೆ ಅಧಿಕಾರಿ ವರ್ಗ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಂತೆ ತಿಳಿಸಿದರು.
ಜಿಲ್ಲೆಯ ನದಿ ಕೆರೆ ಪಾತ್ರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗುವ ಸಂಭವವಿರುತ್ತದೆ. ಅಂತಹ ಪ್ರದೇಶದಲ್ಲಿ ವಾಸಿಸುವ ಕುಟುಂಬಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳು ಸೂಚಿಸಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸಮರ್ಪಕವಾಗಿ ನಿರ್ವಹಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಜಾಗೃತಿ ವಹಿಸಲು ನಿರ್ದೇಶಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್ ಅವರು ಮಾತನಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅತೀವೃಷ್ಟಿ ನಿರ್ವಹಣೆಗೆ ಸಿದ್ಧರಾಗಬೇಕು. ಅತೀವೃಷ್ಟಿ ಎದುರಾದಲ್ಲಿ ತಕ್ಷಣ ಜೀವಹಾನಿ ತಡೆಗೆ ಮುಂದಾಗಬೇಕು. ಜನಸಾಮಾನ್ಯರ ಜೀವ, ಆಸ್ತಿಹಾನಿ ತಡೆಗೆ ಸ್ಥಳೀಯ ಹಂತದಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು.
ಅಗ್ನಿಶಾಮಕ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಅತೀವೃಷ್ಟಿ ನಿರ್ವಹಣೆಗೆ ಅಗತ್ಯವಿರುವ ರಕ್ಷಣಾ ಸಾಮಗ್ರಿಗಳನ್ನು ಸುವ್ಯವಸ್ಥೆಯಲ್ಲಿಟ್ಟುಕೊಳ್ಳಬೇಕು.ನುರಿತ ಈಜುಗಾರರನ್ನು ಗುರುತಿಸಿಟ್ಟುಕೊಂಡು ಸಂದರ್ಬಕ್ಕನುಸಾರ ಸಾರ್ವಜನಿಕರ ಸಂರಕ್ಷಣೆಗೆ ಆದ್ಯತೆ ನೀಡಲು ತಿಳಿಸಿದರು.
ಹೆಚ್ಚುವರಿ ಜಿಲ್ಲಾದಿಕಾರಿ ಸುರೇಖಾ ಅವರು ಮಾತನಾಡಿ ಜಿಲ್ಲಾ ಕೇಂದ್ರ ಸೇರಿದಂತೆ ತಾಲೂಕು ಮಟ್ಟದಲ್ಲಿ ಅತೀವೃಷ್ಟಿ ನಿರ್ವಹಣೆಗಾಗಿ ಜನಸಾಮಾನ್ಯರಿಗೆ ಸಹಾಯವಾಣಿ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಸಂದಿಗ್ದ ಪರಿಸ್ಥಿತಿಯಲ್ಲಿ ಈ ಕೆಳಕಂಡ ಕಂಟ್ರೋಲ್ ರೂಮ್ ಗೆ ಕರೆ ಮಾಡುವ ಮೂಲಕ ಸಹಾಯ ಪಡೆಯುವಂತೆ ತಿಳಿಸಿದರು.
ಗದಗ ತಾಲೂಕು-08372-250009, ಗಜೇಂದ್ರಗಡ–08381-298982,ಲಕ್ಷ್ಮೇಶ್ವರ 08487 273273, ಮುಂಡರಗಿ-08371-262237, ನರಗುಂದ-08377-245243, ರೋಣ—08381-267239, ಶಿರಹಟ್ಟಿ- 08487-242100.
ಗದಗ ತಾಲೂಕು-08372-250009, ಗಜೇಂದ್ರಗಡ–08381-298982,ಲಕ್ಷ್ಮೇಶ್ವರ 08487 273273, ಮುಂಡರಗಿ-08371-262237, ನರಗುಂದ-08377-245243, ರೋಣ—08381-267239, ಶಿರಹಟ್ಟಿ- 08487-242100.
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಜಿ.ಪಂ.ಉಪಕಾರ್ಯದರ್ಶಿ ಸಿ.ಬಿ.ದೇವರಮನಿ, ಮುಖ್ಯ ಯೋಜನಾಧಿಕಾರಿ ನಿರ್ಮಲಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ ಬಿದರಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿ ಸಯ್ಯದ್, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ. ಹುಲಗಣ್ಣವರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟಿಮನಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಆಯಾ ತಾಲೂಕುಗಳ ತಹಶೀಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.