ಬೆಂಗಳೂರು: “ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿ ಜನ ಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಎಲ್ಪಿಜಿ ಹಾಗೂ ತೈಲ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಸ್ನೇಹಿತರು ಜನಾಕ್ರೋಶ ಯಾತ್ರೆ ಮಾಡುತ್ತಿದ್ದು, ಇವರಿಗೆ ಕೇಂದ್ರ ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ಕಪಾಳಮೋಕ್ಷ ಮಾಡಿದೆ. ಬಿಜೆಪಿ ನಾಯಕರು ತಮ್ಮ ಆಕ್ರೋಶವನ್ನು ಕೇಂದ್ರ ಸರ್ಕಾರದ ವಿರುದ್ಧ ಮುಂದುವರಿಸಲಿ ಎಂದು ನಮ್ರತೆಯಿಂದ ಮನವಿ ಮಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ?: ಮತ್ತೊಂದೆಡೆ, ಏ.3ರಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ. ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದರು.