ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ ಒಂಬತ್ತಕ್ಕೇರಿದೆ. ಇಂದು ಅವಶೇಷಗಳ ತೆರವು ಕಾರ್ಯಾಚರಣೆ ಸಂದರ್ಭದಲ್ಲಿ ಏಳುಮಲೈ ಎಂಬಾತನ ಮೃತದೇಹ ಪತ್ತೆಯಾಗಿದ್ದು, ಅವಶೇಷಗಳ ತೆರವು ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಡಿ.ದೇವರಾಜ್ ಮಾಹಿತಿ ನೀಡಿದ್ದಾರೆ.
ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು, ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದ ಘಟನೆ ಮಂಗಳವಾರ ಮಧ್ಯಾಹ್ನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಪಾಳ್ಯದಲ್ಲಿ ನಡೆದಿತ್ತು. NDRF, SDRF ಹಾಗೂ ಪೊಲೀಸರು ಕಳೆದ ಮೂರು ದಿನಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರು.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಹೆಣ್ಣೂರು ಠಾಣೆ ಪೊಲೀಸರು ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿಯ ಪುತ್ರ ಭುವನ್ ರೆಡ್ಡಿಯನ್ನು ಈಗಾಗಲೇ ಬಂಧಿಸಿದ್ದಾರೆ. ಅಲ್ಲದೇ ಕಟ್ಟಡದ 4ನೇ ಅಂತಸ್ತಿನವರೆಗೂ ನಿರ್ಮಾಣದ ಜವಾಬ್ದಾರಿ ವಹಿಸಿದ್ದ ಗುತ್ತಿಗೆದಾರ ಮುನಿಯಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.