ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಏಪ್ರಿಲ್ 1 ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಕುಡಿಯುವ ನೀರಿಗೆ ಸಹಾಯವಾಗಲಿದೆ.
ಮಾರ್ಚ್ 30ರ ವರೆಗೆ ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರ ವರೆಗೆ ನೀರಾವರಿಗೆ 11 ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14 ಟಿಎಂಸಿ ಅಗತ್ಯವಿದ್ದು, 3 ಟಿಎಂಸಿ ನೀರನ್ನು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಏಪ್ರಿಲ್ 6 ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು. ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಈ ಸಂಬಂಧ ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ.