ಧಾರವಾಡ: ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಅಧ್ಯಕ್ಷತೆಯಲ್ಲಿ 2024 ನೇ ಸಾಲಿನ 4 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತ್ತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿನ ಪೌರಕಾರ್ಮಿಕರ ಕೆ.ವೈ.ಸಿ ಅಪ್‍ಡೇಟ್ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಮುಕ್ತಾಯಗೊಳಿಸಬೇಕು. ಮತ್ತು ಪೌರಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸಬೇಕೆಂದು ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಕಳೆದ ಸಭೆಯಲ್ಲಿ ಚರ್ಚಿಸಿರುವಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿನ ಪೌರಕಾರ್ಮಿಕರಿಗೆ ಬಾಕಿ ಇರುವ ಸಂಕಷ್ಟ ಭತ್ಯೆಯನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಅವರು ಸೂಚಿಸಿದರು.
ಪೌರಕಾರ್ಮಿಕರಿಗೆ ಕೆಎಮ್‍ಎಫ್, ಕೆಯುಡಿ ಸೇರಿದಂತೆ ವಿವಿಧ ಸ್ವಾಯತ್ತ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಉಪಹಾರ ನೀಡಲಾಗುತ್ತಿದೆ. ಪೌರಕಾರ್ಮಿಕರಿಗೆ ನಿರ್ಮಿಸಿರುವ ತಾತ್ಕಾಲಿಕ ವಿಶ್ರಾಂತಿ ಕೇಂದ್ರಗಳನ್ನು ಸದುಪಯೋಗ ಪಡೆಸಿಕೊಳ್ಳಲು ಅವರಿಗೆ ಹೆಚ್ಚು ಅವಕಾಶ ನೀಡಬೇಕು. ಈ ಹಿನ್ನಲೆಯಲ್ಲಿ ಆಯಾ ವಲಯ ಅಧಿಕಾರಿಗಳು ಮೇಲಸ್ತುವಾರಿ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.