ಗದಗ, ಏಪ್ರಿಲ್ 17;- ದ್ವಿತೀಯ ಪಿಯುಸಿ ಪರೀಕ್ಷೆ- 2 ಅಂತಿಮ ವೇಳಾಪಟ್ಟಿಯು ಈಗಾಗಲೇ ಪ್ರಕಟವಾಗಿದ್ದು, ಇದೇ ಏಪ್ರಿಲ್ 29 ರಿಂದ ಪರೀಕ್ಷೆ ಆರಂಭವಾಗಲಿದೆ. ಆ ನಿಟ್ಟಿನಲ್ಲಿ ಪರೀಕ್ಷೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶನದಂತೆ ದ್ವಿತೀಯು ಪಿ.ಯು.ಸಿ.-2 ಪರೀಕ್ಷೆಯನ್ನು ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿ ಅಳವಡಿಸುವುದು, ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡುವುದು ಸೇರಿದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಅವರು ಸ್ಪಷ್ಟ ನಿರ್ದೇಶನ ನೀಡಿದರು.
ಪರೀಕ್ಷೆಯ ಗಂಭೀರತೆಯನ್ನು ತಿಳಿಯಬೇಕು. ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ಮಾಡದೇ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಗಾಳಿ, ಬೆಳಕು ವ್ಯವಸ್ಥೆ ಇರಬೇಕು. ಜೊತೆಗೆ ಪರೀಕ್ಷಾ ಸಂದರ್ಭದಲ್ಲಿ ನಿರಂತರ ವಿದ್ಯುತ್ ಸಂಪರ್ಕ ಇರಬೇಕು ಎಂದರು.
ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಕೊನೆಯ ಸ್ಥಾನ ಪಡೆದಿರುವುದು ಬೇಸರ ತಂದಿದೆ. ಆದ್ದರಿಂದ ಮುಂದಿನ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಉತ್ತಮ ಫಲಿತಾಂಶ ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಅಳವಡಿಸಬೇಕು. ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳುಕಾಲೇಜಿಗೆ ಬರುವ ಮತ್ತು ಹೋಗುವ ಸಮಯ ದಾಖಲಾಗಬೇಕು. ಬಯೋಮೆಟ್ರಿಕ್ನಲ್ಲಿ ದೋಷ ಉಂಟಾದಲ್ಲಿ ಆಯಾಯ ಕಾಲೇಜಿನ ಪ್ರಾಂಶುಪಾಲರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರು ಮಾತನಾಡಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಸುಗಮವಾಗಿ ಹಾಗೂ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಗಮನ ಹರಿಸಬೇಕು ಎಂದು ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಿ.ಎನ್.ಕುರ್ತಕೋಟಿ ಅವರು ಮಾತನಾಡಿ ಜಿಲ್ಲೆಯ ರೋಣ ಪಟ್ಟಣದ ವೀರರಾಣಿ ಚೆನ್ನಮ್ಮ ಪದವಿ ಪೂರ್ವ ಕಾಲೇಜು, ನರಗುಂದ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು, ಲಕ್ಷ್ಮೇಶ್ವರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು, ಶಿರಹಟ್ಟಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು, ಮುಂಡರಗಿಯ ಅನ್ನದಾನೇಶ್ವರ ಕಾಲೇಜು, ಗಜೇಂದ್ರಗಡ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಗದಗ ನಗರದ ಎಚ್.ಸಿ.ಇ.ಎಸ್. ಪದವಿ ಪೂರ್ವ ಕಾಲೇಜು ಮತ್ತು ಜೆ.ಟಿ.ಪದವಿ ಪೂರ್ವ ಕಾಲೇಜು ಈ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.