ಬೆಂಗಳೂರು/ಲಖನೌ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟವು 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲಖನೌನಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ‘ಇಂಡಿಯಾ’ ಮೈತ್ರಿಕೂಟ 300 ಸ್ಥಾನ ದಾಟಿದರೆ, ಬಿಜೆಪಿಯ ಎನ್ಡಿಎ 200 ಸ್ಥಾನದ ಆಸುಪಾಸಿನಲ್ಲಿರಲಿದೆ. ಈ ಬಾರಿ ಕೇಂದ್ರದಲ್ಲಿ ನಮ್ಮ ಮೈತ್ರಿಕೂಟ ಸರ್ಕಾರ ರಚಿಸುವುದು ಖಚಿತ ಎಂದು ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ರಾಹುಲ್ ಗಾಂಧಿ ದೇಶಾದ್ಯಂತ ಭಾರತ ಜೋಡೋ ಯಾತ್ರೆ ಮೂಲಕ ನಿರುದ್ಯೋಗ ಹಾಗೂ ಬೆಲೆ ಏರಿಕೆಯು ಜನರನ್ನು ಪ್ರಮುಖವಾಗಿ ಕಾಡುತ್ತಿರುವ ಸಮಸ್ಯೆ ಎಂದು ಅರಿತರು. ಈ ಸಮಸ್ಯೆಗಳಿಂದ ತತ್ತರಿಸಿರುವ ಕರ್ನಾಟಕ ರಾಜ್ಯದ ಜನರಿಗೆ ನೆರವಾಗಬೇಕು ಎಂದು ನಾವು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆವು ಎಂದು ಅವರು ತಿಳಿಸಿದರು.
ಅದರಂತೆ, ಕರ್ನಾಟಕದಲ್ಲಿ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಮೂಲಕ 2 ಸಾವಿರ ಹಣ ಪಡೆಯುತ್ತಿದ್ದಾರೆ. 1.50 ಕೋಟಿ ಮನೆಗಳಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಅಲ್ಲದೇ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ‘ಇಂಡಿಯಾ’ ಮೈತ್ರಿಕೂಟ ರಚನೆಯಾಯಿತು. ತೆಲಂಗಾಣ ಚುನಾವಣೆಯಲ್ಲೂ ನಾವು 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು, ಆ ಪೈಕಿ ಬಹುತೇಕ ಜಾರಿಯಾಗಿವೆ. ಕೆಲವು ಜಾರಿ ಪ್ರಕ್ರಿಯೆಯಲ್ಲಿವೆ ಎಂದು ವಿವರಿಸಿದರು.
ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಂದರೆ ಅಧಿಕಾರಿಕ್ಕೆ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕಾಂಗ್ರೆಸ್ ಘೋಷಿಸಿದೆ. ಐದು ನ್ಯಾಯ ಯೋಜನೆಗಳ ಮೂಲಕ ಒಟ್ಟಾರೆ 25 ಗ್ಯಾರಂಟಿಗಳನ್ನು ಪ್ರಕಟಿಸಿದ್ದು, ಮಹಾಲಕ್ಷ್ಮೀ ಯೋಜನೆ ಮೂಲಕ ವಾರ್ಷಿಕ 1 ಲಕ್ಷ, ನಿರುದ್ಯೋಗಿ ಯುವಕರಿಗೆ ವಾರ್ಷಿಕ ಒಂದು ಲಕ್ಷ ಶಿಷ್ಯ ವೇತನ ಹಾಗೂ ತರಬೇತಿ, ರೈತರ ಸಾಲ ಮನ್ನಾ ಹಾಗೂ ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ, ನರೇಗಾ ಕೂಲಿ 400 ರೂ.ಗೆ ಏರಿಕೆ, ನಗರ ಪ್ರದೇಶದಲ್ಲೂ ಉದ್ಯೋಗ ಖಾತ್ರಿ, 25 ಲಕ್ಷ ವರೆಗಿನ ಆರೋಗ್ಯ ವಿಮೆ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ ಎಂದು ಶಿವಕುಮಾರ್ ತಿಳಿಸಿದರು.
ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಈ ಗ್ಯಾರಂಟಿ ಕಾರ್ಡ್ಗೆ ಸಹಿ ಹಾಕಿದ್ದು, ನಾವು ಪ್ರಣಾಳಿಕೆಯಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಲಿದ್ದೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ. ನಾವು ಬಸವಣ್ಣನ ನಾಡಿನಿಂದ ಬಂದಿದ್ದು, ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದರು. ಇದೇ ವೇಳೆ, ಕರ್ನಾಟಕದ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲೂ ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ಖರ್ಗೆ ಘೋಷಿಸಿದ್ದು, ಈ ಯೋಜನೆಗಳನ್ನು ನಾವು ಜಾರಿ ಮಾಡಿಯೇ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮೋದಿ ಅವರು ಮಂಗಳಸೂತ್ರದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಅವರು ಅಧಿಕಾರಕ್ಕೆ ಬರುವ ಮುನ್ನ ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ 25 ಸಾವಿರ ಇತ್ತು. ಈಗ 10 ವರ್ಷಗಳ ನಂತರ ಅದು 75 ಸಾವಿರಕ್ಕೆ ಏರಿಕೆಯಾಗಿದೆ. ಇದರಿಂದಾಗಿ ಮಹಿಳೆಯರು ಮಂಗಳಸೂತ್ರ ಮಾಡಿಸಿಕೊಳ್ಳಲು ಪರದಾಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಧಾನಮಂತ್ರಿಗಳ ಹೇಳಿಕೆ ನಿಜಕ್ಕೂ ಖಂಡನೀಯ ಎಂದು ಅವರು ಕಿಡಿಕಾರಿದರು.