ನವದೆಹಲಿ : ಕರ್ನಾಟಕದಲ್ಲಿ ಅಲ್ಪಸಂಖ್ಯಾತರಿಗೆ ಶೇಕಡಾ 4ರಷ್ಟು ಮೀಸಲಾತಿ ಕುರಿತ ವಿಚಾರ ಇಂದು ರಾಜ್ಯಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಮುಸ್ಲಿಮರಿಗೆ ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ವಿವರಣೆಗೆ ಆಡಳಿತಾರೂಢ ಪಕ್ಷದ ಸದಸ್ಯರು ಒತ್ತಾಯಿಸಿದ್ದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಬಳಿಕ ಸದನವನ್ನ ಮಧ್ಯಾಹ್ನಕ್ಕೆ ಮುಂದೂಡಬೇಕಾಯಿತು.
ಕರ್ನಾಟಕ ಉಪಮುಖ್ಯಮಂತ್ರಿ ಶಿವಕುಮಾರ್, ಭಾನುವಾರ ಕಾರ್ಯಕ್ರಮವೊಂದರಲ್ಲಿ, ರಾಜ್ಯದಲ್ಲಿ ಸಾರ್ವಜನಿಕ ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರು ಮತ್ತು ಇತರ ಹಿಂದುಳಿದ ವರ್ಗಗಳಿಗೆ ನಾಲ್ಕು ಶೇಕಡಾ ಮೀಸಲಾತಿ ಒದಗಿಸುವ ಮಸೂದೆಯ ಕುರಿತು ಮಾತನಾಡಿದ್ದರು. ಈ ವಿಚಾರ ಸಂಸತ್‌ನಲ್ಲಿ ಪ್ರಸ್ತಾಪವಾಗಿದೆ.
ಡಿಕೆಶಿ ಹೇಳಿಕೆ ಬಗ್ಗೆ ಕಿರಣ್ ರಿಜಿಜು ಆರೋಪ ಏನು?: ಈ ಕುರಿತು ರಾಜ್ಯಸಭೆಯಲ್ಲಿ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಕಿರಣ್ ರಿಜಿಜು, ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಮತ್ತು ಜವಾಬ್ದಾರಿಯುತ ನಾಯಕ, ಸಾಂವಿಧಾನಿಕ ಹುದ್ದೆಯನ್ನು ಹೊಂದಿದ್ದು, ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ಕಲ್ಪಿಸಲು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದೇವೆ ಎಂದು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. ನಾವು ಈ ಹೇಳಿಕೆಯನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಇದು ಭಾರತದ ಸಂವಿಧಾನದ ಮೇಲಿನ ಹಲ್ಲೆ ಆಗಿದೆ ಎಂದು ಅವರು ಆರೋಪ ಮಾಡಿದರು.