ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಬುಧವಾರ ನಡೆಸಿದ್ದ ದಾಳಿ, ಗುರುವಾರ ಕೂಡ ಮುಂದುವರೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜು, ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಸಿದ್ಧಾರ್ಥ ಕಾಲೇಜಿನಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ಪ್ರಭಾವಿ ವ್ಯಕ್ತಿಯೊಬ್ಬರ ಸೂಚನೆ ಮೇರೆಗೆ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಟ್ರಸ್ಟ್ ಮೂಲಕ ರನ್ಯಾ ರಾವ್ ಕ್ರೆಡಿಟ್ ಕಾರ್ಡ್‌ಗೆ 40 ಲಕ್ಷ ರೂಪಾಯಿ ವರ್ಗಾವಣೆ ಮಾಡಲಾಗಿತ್ತು ಎಂಬ ಆರೋಪವಿದ್ದು, ಇದರ ಆಧಾರದಲ್ಲಿ ಒಟ್ಟು 16 ಕಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಡಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದುಬೈನಿಂದ ಬಂದ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಪಡಿಸಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು ರನ್ಯಾ ರಾವ್ ಅವರನ್ನು ಬಂಧಿಸಿ 14.2 ಕೆಜಿ ತೂಕದ ಮತ್ತು 12.56 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡಿದ್ದರು.