ನವದೆಹಲಿ, ಏಪ್ರಿಲ್ 24: ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿ(Terror Attack)ಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇಂದು ಸರ್ವಪಕ್ಷ ಸಭೆ ಕರೆದಿದೆ. ಸಂಜೆ ವೇಳೆಗೆ ಸಭೆ ನಡೆಯುವ ಸಾಧ್ಯತೆ ಇದ್ದು, ಈ ಮಹತ್ವದ ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸುವ ಸಾಧ್ಯತೆ ಇದೆ. ಪಹಲ್ಗಾಮ್ ದಾಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳು, ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಈ ಸಭೆಯಲ್ಲಿ ಚರ್ಚಿಸಬಹುದು ಎಂದು ಹೇಳಲಾಗುತ್ತಿದೆ.
ಭಯೋತ್ಪಾದಕ ದಾಳಿಯ ವಿರುದ್ಧ ಕ್ರಮ ಕೈಗೊಳ್ಳಲು ಬುಧವಾರ ಪ್ರಧಾನಿಯವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ಸೇರಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದಾಳಿಯಲ್ಲಿ ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದಾರೆ. ಇತರ ಹಲವರು ಗಾಯಗೊಂಡರು.
ಗುರುವಾರ ಸಂಜೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕೇಂದ್ರವು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಮಾಹಿತಿ ನೀಡಲಿದ್ದು, ಅವರ ಅಭಿಪ್ರಾಯಗಳನ್ನು ಕೇಳಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.