ಬೆಂಗಳೂರು: ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಬೇಕು ಎಂದು ಎಸ್‌ಸಿ, ಎಸ್‌ಟಿ, ಒಬಿಸಿ, ಅಲೆಮಾರಿ ಅಲ್ಪಸಂಖ್ಯಾತ ಸಮುದಾಯಗಳ ಮುಖಂಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಗುರುವಾರ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಿದ ಮುಖಂಡರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೂಡಲೇ ಈಡೇರಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.
ಕರ್ನಾಟಕ ಸರ್ಕಾರದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಕಾಂತರಾಜ್ ಅವರ ನೇತ್ರತ್ವದಲ್ಲಿ ಸಮೀಕ್ಷೆ ಮಾಡಿ, ಮಾನ್ಯ ಜಯಪ್ರಕಾಶ್ ಹೆಗಡೆಯವರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ” ಯನ್ನು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಮಂಡಿಸಿ ಅಂಗೀಕರಿಸಿ, ಅನುಮೋದಿಸಿ, ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಚಾಲ್ತಿಯಿರುವ ಒಟ್ಟು ಮೀಸಲಾತಿಯ ಪ್ರಮಾಣವನ್ನು ಶೇಕಡಾ ೭೫ ಕ್ಕೆ ವಿಸ್ತರಿಸಬೇಕು. ಎಸ್ ಸಿ, ಎಸ್ ಟಿ, ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಬೇಕು. ಭಾರತದ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮೀಸಲಾತಿ ನೀತಿ ಜಾರಿಗೆ ತರಬೇಕು. ಇದಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ಸೂಕ್ತ ರೀತಿಯಲ್ಲಿ ಒತ್ತಾಯಿಸಬೇಕು.ವಿಧಾನಸಭೆ, ಲೋಕಸಭೆಗಳಲ್ಲಿ ಯಂತಹ ಶಾಸನ ಸಭೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಲಿಸಬೇಕು. ವಿಧಾನ ಪರಿಷತ್ ಮತ್ತು ರಾಜ್ಯಸಭೆಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಬೇಕು. ಈ ಕುರಿತು ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದರು.
ಕರ್ನಾಟಕದ ಖಾಸಗಿ ರಂಗದಲ್ಲಿ ಮೀಸಲಾತಿ ಜಾರಿಗೆ ತರಲು ಕಾನೂನು ರೂಪಿಸಬೇಕು. ಕೇಂದ್ರ ಸರ್ಕಾರ ಲ್ಯಾಟರಲ್ ಎಂಟ್ರಿ ಇತ್ಯಾದಿ ಅಕ್ರಮ ಮಾರ್ಗಗಳ ಮೂಲಕ ಶೋಷಿತ ಸಮುದಾಯಗಳಿಗೆ ನೇಮಕಾತಿಯಲ್ಲಿ ಅನ್ಯಾಯ ಮಾಡುತ್ತಿದೆ. ತಕ್ಷಣ ಕೇಂದ್ರದ ಬ್ಯಾಕ್ ಲಾಗ್ ಹುದ್ದೆಯನ್ನು ಭರ್ತಿ ಮಾಡಲು ಒತ್ತಡ ಹಾಕಬೇಕು. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಹಿಂದುಳಿದವರಿಗೂ ಬ್ಯಾಕ್ ಹುದ್ದೆ ಭರ್ತಿ ಮಾಡಲು ಕ್ರಮವಹಿಸಬೇಕು. ಈ ಹಕ್ಕೊತ್ತಾಯ ಗಳನ್ನು ಜಾರಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಡಿನ ಶೋಷಿತ ಸಮುದಾಯಗಳ ಜನತೆ ಮತ್ತು ಸಂಘ ಸಂಸ್ಥೆಗಳು ಒತ್ತಾಯಿಸುತ್ತೇವೆ. ತಪ್ಪಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾದ ಹೋರಾಟವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.
ಪ್ರಧಾನ ಸಂಚಾಲಕ ಕೆ ಎಂ ರಾಮಚಂದ್ರಪ್ಪ, ಸಂಚಾಲಕ ಮಾವಳ್ಳಿ ಶಂಕರ್, ಅನಂತನಾಯಕ. ಎನ್, ಎಣ್ಣೆಗೆರೆ ಆರ್. ಮುಸ್ಲಿಂ ಸಮಾಜ ಮುಖಂಡ ಮೌಲಾನ ಯೂಸುಫ್ ಖನ್ನಿ ಸೇರಿದಂತೆ ವಿವಿಧ ಸಮಾಜಗಳ ಮುಖಂಡು ಸಭೆಯಲ್ಲಿ ಉಪಸ್ಥಿತರಿದ್ದರು.