ಬೆಂಗಳೂರು, ಜುಲೈ 10: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ನನ್ನು ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು (ಜು.10) ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದರು.
ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯಿತು. ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನಲ್ಲಿ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದರು. ಅಧಿಕಾರಿಗಳಿಂದ ಫ್ಲ್ಯಾಟ್ನಲ್ಲಿ ದಾಖಲೆಗಳ ಪರಿಶೀಲನೆ ನಡೆಯಿತು.