ಬಳ್ಳಾರಿ,ಜು.೨೬ ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದ ಡೆಂಘಿ ಹರಡದಂತೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒ ಅವರಿಗೆ ಸೂಚಿಸಿದರು.
ಅವರು, ಗುರುವಾರದಂದು ಡೆಂಘಿ ಜ್ವರ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಬೆಂಗಳೂರಿನ ತಮ್ಮ ಕಚೇರಿಯಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಪಂ ಸಿಇಒಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಅವರು ಮಾತನಾಡಿದರು.
ಡೆಂಘಿ ಹರಡದಂತೆ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೂಡಿ ಕ್ಷೇತ್ರ ಭೇಟಿ ನಡೆಸಬೇಕು. ಡೆಂಘಿ ಪ್ರಕರಣ ಕಂಡುಬಂದಲ್ಲಿ ಆ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಬೇಕು ಮತ್ತು ಆ ವ್ಯಾಪ್ತಿಯ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಎಚ್ಚರ ವಹಿಸುವಂತೆ ನಿರ್ದೇಶಿಸಬೇಕು ಎಂದು ತಿಳಿಸಿದರು.
ಮನೆ ಸುತ್ತ ಮುತ್ತ ಸ್ವಚ್ಛತೆ ಕೈಗೊಳ್ಳುವಂತೆ ತಿಳಿಸಬೇಕು. ಮನೆ ಆವರಣ, ಹಿಂಭಾಗ ಮಳೆ ನೀರು ನಿಲ್ಲದಂತೆ ಎಚ್ಚರವಹಿಸಲು, ನೀರು ಬಳಸುವ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವಂತೆ ಸೂಚಿಸಬೇಕು. ಗ್ರಾಮಗಳ ಜಾನುವಾರು ಕುಡಿಯುವ ನೀರಿನ ಸಂಗ್ರಹ ತೊಟ್ಟಿಗಳನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಬೇಕು ಎಂದರು.
ಸೊಳ್ಳೆ ಲಾರ್ವಾ ಉತ್ಪತ್ತಿಯಾಗದಂತೆ ವಾರಕ್ಕೊಮ್ಮೆ ಮನೆ ಭೇಟಿ ನಡೆಸಿ, ಲಾರ್ವಾ ಸಮೀಕ್ಷೆ, ಜಾಗ್ರತೆ ಮತ್ತು ಅಗತ್ಯ ಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಅದನ್ನು ಮೇಲ್ವಿಚಾರಣೆ ನಡೆಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಈ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತ ರಂದೀಪ್.ಡಿ ಹಾಗೂ ಅನೇಕರು ಇದ್ದರು.
ಬಳಿಕ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಡೆಂಘಿ ನಿಯಂತ್ರಣದಲ್ಲಿದ್ದು, ಇನ್ನು ಹೆಚ್ಚು ಹೆಚ್ಚು ಮಾದರಿ ಪರೀಕ್ಷೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆ ವ್ಯವಸ್ಥೆ ಇರಿಸಿಕೊಳ್ಳಬೇಕು. ಕುಡಿಯುವ ನೀರು ಕಲುಷಿತಗೊಳ್ಳದಂತೆ ನಿಗಾವಹಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಂವಾದದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕೀಟ ಶಾಸ್ತ್ರಜ್ಞೆ ಡಾ.ನಂದಾಕಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಇತರರು ಉಪಸ್ಥಿತರಿದ್ದರು.