ಬೆಂಗಳೂರು,17: ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಮೇ 19ರಿಂದ ಅತಿ ಹೆಚ್ಚು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಗಾಳಿ ಬೀಸಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಎಚ್ಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.