ದೇಶಾದ್ಯಂತ ಮುಂಗಾರು ಮಳೆಯ ಆರ್ಭಟ ಶುರುವಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಮಳೆ ಹೆಚ್ಚಾಗಲಿದೆ, ದಕ್ಷಿಣ ಹಾಗೂ ಮಧ್ಯಮಹಾರಾಷ್ಟ್ರ, ಮರಾಠವಾಡ, ಕೊಂಕಣ, ಹಾಗೂ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆ ಬೀಳಲಿದೆ ಎಂದು ಹೇಳಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಸೋಮವಾರ ಸಂಜೆ ಮುಂಬೈನಲ್ಲಿ ಭಾರಿ ಮಳೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ 50 ಮಿಲಿಮೀಟರ್ ಮಳೆಯಾಗಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಉಪ-ಹಿಮಾಲಯ ಪಶ್ಚಿಮದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.
ಮುಂದಿನ ಏಳು ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಮಳೆಯಾಗಲಿದೆ, ಜೂನ್ 11 ರಿಂದ 15ರವರೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಹೆಚ್ಚು ಮಳೆ ಸುರಿಯಲಿದೆ. ಜೂನ್ 13, 14ರಂದು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶದಲ್ಲಿ ಮಳೆಯಾಗಲಿದೆ.