ಬೆಂಗಳೂರು, : ಕರ್ನಾಟಕದಲ್ಲಿ ಹಿಂಗಾರು ಮಳೆ ಜೋರಾಗಿದೆ. ಕಳೆದೊಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಬೆಂಗಳೂರು ಮಾತ್ರವಲ್ಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲೂ ವರುಣನ ಆರ್ಭಟ ಜೋರಾಗಿದೆ. ಆದರೂ ಸಹ ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ.23ರಂದು ಗುರುವಾರ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.