ಉಡುಪಿ: ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು (ಜು.9)ರಂದು ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ಜು.9 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಐಟಿಐಗಳಿಗೆ ರಜೆ ಇರುವುದಿಲ್ಲ.
ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜು.9 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಆದೇಶಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜು.9 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.