ಬೆಂಗಳೂರು: ಬೆಳಗಾವಿಯ ಸುವರ್ಣಸೌಧದ ಸಮೀಪ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ ಮೀಸಲಾತಿ ಕೋರಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಪ್ರಕರಣವನ್ನು ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಸುವರ್ಣ ಸೌಧದ ಮುಂದೆ 2024ರ ಡಿಸೆಂಬರ್ 10ರಂದು ನಡೆದ ಲಾಠಿ ಚಾರ್ಜ್ ಘಟನೆಯನ್ನು ತನಿಖಾ ಆಯೋಗಕ್ಕೆ ವಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಾಗಲಕೋಟೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ರಾಜ್ಯ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ಆಯೋಗವು ಕಾಲ ಮಿತಿಯಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಿದೆ.