ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡಿರುವ ನಟಿ ಹರ್ಷವರ್ಧಿನಿ ರನ್ಯಾ ರಾವ್ ಮತ್ತು ಅವರ ತಂದೆ ಕೆ.ರಾಮಚಂದ್ರ ರಾವ್ ವಿರುದ್ಧ ಯಾವುದೇ ಸುಳ್ಳು, ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿರುವ ಸಂಬಂಧ ಸೂಕ್ತ ಆದೇಶ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿತು.
ವಿಚಾರಣಾ ನ್ಯಾಯಾಲಯದ ಆದೇಶದ ನಡುವೆಯೂ ರನ್ಯಾ ರಾವ್ ಕುಟುಂಬಸ್ಥರ ವಿರುದ್ಧ ಆಧಾರರಹಿತ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಮಾಧ್ಯಮ ಸಂಸ್ಥೆಗಳು, ಕೇಂದ್ರ ಸರ್ಕಾರಕ್ಕೆ ನೋಟಿಸ್: ಅಲ್ಲದೆ, ನ್ಯಾಯಾಲಯದ ಆದೇಶವಿದ್ದರೂ ಈ ರೀತಿಯ ಸುದ್ದಿ ಪ್ರಸಾರವನ್ನು ತಡೆಯುವುದಕ್ಕಾಗಿ ಅಗತ್ಯ ಮಾರ್ಗಸೂಚಿಗಳನ್ನು ಜಾರಿ ಮಾಡುವ ಅಗತ್ಯವಿದೆ ಎಂದು ತಿಳಿಸಿರುವ ನ್ಯಾಯಪೀಠ, ಪ್ರಕರಣ ಸಂಬಂಧ ಎಲ್ಲ ಮಾಧ್ಯಮ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿತು.