ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಡಿಕೆ ಶಿವಕುಮಾರ್ ಚೆಕ್ ಮೆಟ್ ಕೊಟ್ಟಿದ್ದಾರೆ. 2028ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ಇನ್ನು 8-10 ವರ್ಷಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಹೇಳುವ ಮೂಲಕ ಪಕ್ಷದೊಳಗಿನ ಸ್ನೇಹಿತರು ಮತ್ತು ಶತ್ರುಗಳಿಗೆ ಸಂದೇಶ ರವಾನಿಸಿದ್ದಾರೆ.
ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಸಚಿವರು ಪ್ರಯತ್ನಿಸುತ್ತಿರುವ ಹೊತ್ತಿನಲ್ಲಿ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.
ಇತ್ತೀಚಿಗೆ ನಡೆದ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಡಿಕೆಶಿ, ಡಿಕೆಶಿ ಎಂದು ಘೋಷಣೆ ಕೂಗುತ್ತಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ನಾನು ಗೆದ್ದು ನನ್ನ ನೇತೃತ್ವದಲ್ಲಿ ಪಕ್ಷ ಗೆದ್ದಾಗ ನೀವು ಇಂತಹ ಘೋಷಣೆಗಳನ್ನು ಕೂಗಬಹುದು. ನನ್ನ ಆರೋಗ್ಯ ಚೆನ್ನಾಗಿದ್ದು, ಇನ್ನು 8-10 ವರ್ಷ ರಾಜಕೀಯದಲ್ಲಿ ಇರುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ ಎಂದರು ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರೇ ಪಕ್ಷದೊಳಗೆ ರಣಕಹಳೆ ಮೊಳಗಿಸಬಲ್ಲ ಭವಿಷ್ಯದ ನಾಯಕ ಎಂದು ಬಿಂಬಿಸಿಕೊಳ್ಳಲು ಆರಂಭಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ.
ಇದು ಖಂಡಿತವಾಗಿಯೂ ಅವರ ಬೆಂಬಲಿಗರಲ್ಲಿ ಸ್ಥೈರ್ಯವನ್ನು ಹೆಚ್ಚಿಸುತ್ತದೆ ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ಬಯಸುವ ಎರಡನೇ ಸಾಲಿನ ನಾಯಕರಿಗೆ, ವಿಶೇಷವಾಗಿ ಮೊದಲ ಬಾರಿಯ ಶಾಸಕರಿಗೆ ಎಚ್ಚರಿಕೆಯ ಸಂದೇಶವನ್ನು ಕಳುಹಿಸುತ್ತದೆ. 62 ವರ್ಷದ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಂತೆ ಕ್ರಿಯಾಶೀಲರಾಗುವ ನಿರೀಕ್ಷೆಯಲ್ಲಿದ್ದಾರೆ ಎಂದು ಶಿವಕುಮಾರ್ ಪರ ಒಲವು ಹೊಂದಿರುವ ನಾಯಕರೊಬ್ಬರು ಹೇಳಿದರು.